ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ಖಂಡಿಸಿ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುದ್ದು, ಘರ್ಷಣೆಯಲ್ಲಿ ಹಲವು ಮಹಿಳೆಯರು ಹಾಗೂ ಐವರು ಪೊಲೀಸರು ಗಾಯಗೊಂಡಿದ್ದಾರೆ.
ಕಾರ್ಮಿಕ ನೀತಿ ಖಂಡಿಸಿ ಸಾಯಿ ಗಾರ್ಮೆಂಟ್ಸ್ ಹಾಗೂ ಜಾಕಿ ಗಾರ್ಮೆಂಟ್ಸ್ ಸೇರಿದಂತೆ ಐದು ಕಂಪನಿಗಳ ಸುಮಾರು 10 ಸಾವಿರ ಕಾರ್ಮಿಕರು ಇಂದು ಬೆಳಗ್ಗೆ ದಿಢೀರ್ ಪ್ರತಿಭಟನೆ ನಡೆಸುತ್ತಿದ್ದು, ಮಧ್ಯಾಹ್ನ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಲಘು ಲಾಠಿ ಪ್ರವಾಹ ನಡೆಸಿದರು.
ಈ ವೇಳೆ ಕೆಲವು ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇದರಿಂದ ಪೊಲೀಸರು ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಘರ್ಷಣೆಯಲ್ಲಿ 5 ಪೊಲೀಸ್ ವಾಹನ ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಅವರು, ಸದ್ಯ ಬೊಮ್ಮನಹಳ್ಳಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕಾರ್ಮಿಕರ ಪ್ರತಿಭಟನೆಯಿಂದಾಗಿ ಹೊಸೂರು ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಬೇಗೂರು ಜಂಕ್ಷನ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ.