ಬೆಂಗಳೂರು: ದೇಶವಿರೋಧಿ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಯಾವ ದೇಶಭಕ್ತನೂ ಇಂತಹ ಕೃತ್ಯಗಳನ್ನು ಒಪ್ಪುವುದಿಲ್ಲ. ಪೊಲೀಸರು ಆದಷ್ಟು ಬೇಗ ಘೋಷಣೆ ಕೂಗಿದವರನ್ನು ಪತ್ತೆ ಹಚ್ಚಲಿದ್ದಾರೆ. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ದೇಶವಿರೋಧಿ ಘೋಷಣೆ ಕೂಗಿದವರನ್ನು ಪತ್ತೆಹಚ್ಚುವಂತೆ ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದ ಅವರು ಕೆಲ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಘೋಷಣೆ ಕೂಗಿರುವುದು ಗಮನಕ್ಕೆ ಬಂದಿದೆ. ಆದರೆ, ಇದರ ಹಿಂದೆ ಯಾರಾದರೂ ಇದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಿ ಘೋಷಣೆ ಕೂಗಿದವರನ್ನು ಪತ್ತೆ ಹಚ್ಚಲು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಒಂದು ವೇಳೆ ಘೋಷಣೆ ಕೂಗಿದವರಿಗೆ ಭಯೋತ್ಪಾದಕರ ನಂಟಿರುವುದು ಖಚಿತವಾದರೆ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದರು.
ಇನ್ನು ಈ ಸಂಬಂಧ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.