ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಡಿಸೆಂಬರ್ 17 ರಂದು ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಜಿಲ್ಲಾ ಕ್ರೀಡಾಂಗಣದಲ್ಲಿ ನಾಳೆ ಮಧ್ಯಾಹ್ನ 2 ಗಂಟೆಗೆ ಏರ್ಪಡಿಸಲಾಗಿದ್ದು, ಬೃಹತ್ ವೇದಿಕೆ ಸಿದ್ಧವಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಅವರು ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯದ ಸಚಿವರು, ಶಾಸಕರು, ಸಂಸದರು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಭದ್ರತೆಗಾಗಿ 11 ಎಸ್ಪಿ, 20 ಡಿಎಸ್ಪಿ, 56 ಪಿಐ, 124 ಪಿಎಸ್ಐ, 80 ಎಎಸ್ಐ ಸೇರಿದಂತೆ ಒಟ್ಟು 2000 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಪಿ.ಜೆ. ಕೃಷ್ಣಭಟ್ಟ ತಿಳಿಸಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ಸುಮಾರು 50 ಸಾವಿರ ಜನರು ಸೇರುವ ನಿರೀಕ್ಷೆಯಿದ್ದು, ಕ್ರೀಡಾಂಗಣದ 4 ಮತ್ತು 5 ನೇ ಗೇಟ್‌ನಲ್ಲಿ ಸಾರ್ವಜನಿಕರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದೆ.