ಬೆಂಗಳೂರು: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ಸಾಲಿನ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದ್ದು ಮೇ 7, 2017ರಂದು ನಡೆಯುವ ಸಾಧ್ಯತೆಯಿದೆ.
ಕೇಂದ್ರೀಯ ಪರೀಕ್ಷಾ ಮಂಡಳಿಯಿಂದ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗದಿದ್ದರೂ ಕೂಡ ಬೆಂಗಳೂರು ನಗರದ ಕಾಲೇಜುಗಳು ವಿದ್ಯಾರ್ಥಿಗಳಿಗೆ ವೇಳಾಪಟ್ಟಿಯನ್ನು ಕಳುಹಿಸುತ್ತಿವೆ. ಮಂಡಳಿಯ ಸಂದೇಶದ ಪ್ರಕಾರ ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 23.
ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ ಅವರು ಕೂಡ ಮೇ 7ರಂದು ನೀಟ್ ಪರೀಕ್ಷೆ ಎಂದು ಹೇಳುತ್ತಿದ್ದಾರೆ. ಈ ಮೊದಲೇ ಘೋಷಿಸಿರುವಂತೆ ಮೇ ತಿಂಗಳ ಮೊದಲ ಭಾನುವಾರ ಪರೀಕ್ಷೆ ನಡೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೀಟ್ ಪರೀಕ್ಷೆಗೆ 180 ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೀಟ್ ಪರೀಕ್ಷೆ ಕಡ್ಡಾಯವಾಗಿದೆ.
ಕನ್ನಡ ಭಾಷೆ ಪರೀಕ್ಷೆ ಸೇರ್ಪಡೆಗೆ ರಾಜ್ಯ ಒತ್ತಾಯ:ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ ಕನ್ನಡ ಭಾಷೆಯಲ್ಲಿ ಬರೆಯುವುದನ್ನು ಆಯ್ಕೆಯ ವಿಷಯವನ್ನಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ನೀಟ್ ಪರೀಕ್ಷೆಯನ್ನು 8 ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ ಅದರಲ್ಲಿ ಕನ್ನಡ ಭಾಷೆಯನ್ನು ಸೇರಿಸಿಲ್ಲ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಹ ಪತ್ರ ಬರೆದಿರುವ ರಾಜ್ಯ ಸರ್ಕಾರ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಮನವಿ ಮಾಡಿದೆ.