ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ಹೆಚ್ಚಾಗಿರುವುದರಿಂದ ಬೇಸಿಗೆ ಕಾಲದಲ್ಲಿ ಕರ್ನಾಟಕದ ಜನರು ಲೋಡ್ ಶೆಡ್ಡಿಂಗ್ ಪರಿಸ್ಥಿತಿ ಎದುರಿಸಬೇಕಾಗುತ್ತದೆ.
ಶಿವಮೊಗ್ಗ ಜಿಲ್ಲೆಯ ಶರಾವತಿ ವಿದ್ಯುದಾಗಾರದಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ರಾಜ್ಯದ ವಿದ್ಯುತ್ ಪರಿಸ್ಥಿತಿ ಗಂಭೀರವಾಗಿದ್ದು, ರಾಜ್ಯ ಸರ್ಕಾರ ಲೋಡ್ ಶೆಡ್ಡಿಂಗ್ ಜಾರಿ ಮಾಡುವ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಶರಾವತಿ ವಿದ್ಯುದಾಗಾರದಲ್ಲಿ ಪ್ರತಿನಿತ್ಯ 1,000 ಮೆಗಾವ್ಯಾಟ್ ಉತ್ಪಾದನೆಯಾಗುತ್ತಿತ್ತು. ಆದರೆ, ಬೆಂಕಿ ಅನಾಹುತದಿಂದಾಗಿ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಅಭಾವ ಎದುರಿಸಬೇಕಾಗುತ್ತದೆ.
ರಾಜ್ಯದಲ್ಲಿ ಪ್ರತಿದಿನ 9300 ಮೆಗಾವ್ಯಾಟ್ ವಿದ್ಯುತ್ ಪೂರೈಸಬೇಕಿದೆ. ಅದನ್ನು ಹೇಗೆ ಹೊಂದಿಸಬೇಕು ಎಂಬುದರ ಬಗ್ಗೆ ಸೋಮವಾರದ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಈಗಾಗಲೇ, ಹೆಚ್ಚಿನ ವಿದ್ಯುತ್ ಪೂರೈಕೆ ಮಾಡುವಂತೆ ಇಂಧನ ಸಚಿವ ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.