ಬೆಂಗಳೂರು: ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಈ ಕೂಡಲೇ ಬೆಂಗಳೂರು ಅಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ಮಂಗಳೂರು ಐಜಿಪಿ ಕಚೇರಿಯಲ್ಲೇ ಡಿವೈಎಸ್ಪಿಯಾಗಿದ್ದ ಎಂಕೆ ಗಣಪತಿ(51) ಅವರು ನಿನ್ನೆ ಸಂಜೆ ಮಡಿಕೇರಿಯ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಟಿವಿ ವಾಹಿನಿಗಳಿಗೆ ಸಂದರ್ಶನ ನೀಡಿರುವ ಗಣಪತಿ, ತಮ್ಮ ಸಾವಿಗೆ ಹಿಂದಿನ ಗೃಹ ಸಚಿವ ಜಾರ್ಜ್, ಗುಪ್ತಚರ ಇಲಾಖೆ ಎಡಿಜಿಪಿ ಎಎಂ ಪ್ರಸಾದ್ ಹಾಗೂ ಲೋಕಾಯುಕ್ತ ಐಜಿಪಿ ಪ್ರಣವ್ ಮೊಹಾಂತಿ ಅವರೇ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಜಾರ್ಜ್ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತು.
ಇನ್ನು ಹುಬ್ಬಳ್ಳಿಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಎಂಕೆ ಗಣಪತಿ ಸಾವಿಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಡಿಕೇರಿಯಲ್ಲೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಅಲ್ಲದೆ ಆರೋಪಿಗಳ ವಿರುದ್ಧ ಮೊದಲು ಎಫ್ಐಆರ್ ದಾಖಲಿಸಿ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.
ಮಡಿಕೇರಿ ಜಿಲ್ಲಾಸ್ಪತ್ರೆ ಬಳಿ ಆಂಬ್ಯುಲೆನ್ಸ್ ನಲ್ಲಿ ಗಣಪತಿ ಮೃತದೇಹ ಇಟ್ಟುಕೊಂಡಿರುವ ಪ್ರತಿಭಟನಾಕಾರರು, ಸಚಿವ ಕೆಜೆ ಜಾರ್ಜ್ ಸ್ಥಳಕ್ಕೆ ಆಗಮಿಸಲಿ ಎಂದು ಪಟ್ಟುಹಿಡಿದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಕೊಡಗು ಡಿಸಿ ಹಾಗೂ ಐಜಿಪಿ ಬಿಕೆ ಸಿಂಗ್ ಅವರು ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics