ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಜೆಎಂಎಫ್‌ಸಿ ಕೋರ್ಟ್ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿರುವುದನ್ನು ರದ್ದುಪಡಿಸಬೇಕು ಎಂದು ಕೋರಿರುವ ಐಜಿಪಿ ಪ್ರಣವ್ ಮೊಹಾಂತಿ ಮತ್ತು ಎಡಿಜಿಪಿ ಎ.ಎಂ.ಪ್ರಸಾದ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಮಂಗಳವಾರ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, ಅರ್ಜಿದಾರರ ವಿರುದ್ಧ ಮಡಿಕೇರಿ ಜೆಎಂಎಫ್‌ಸಿ ಮ್ಯಾಜಿಸ್ಟ್ರೇಟ್ ಆದೇಶ ಅಸಮಂಜಸವಾಗಿದೆ ಎಂದು ದೂರಿದರು.
ಕೆ.ಜೆ.ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸುತ್ತಿರುವಾಗ ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ.ಎಂ.ಪ್ರಸಾದ್ ಅವರಿಗೆ ತನಿಖೆ ಎದುರಿಸಲು ಏನು ಕಷ್ಟ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಐಜಿಪಿ ಪ್ರಣವ್ ಮೊಹಾಂತಿ ಹಾಗೂ ರಾಜ್ಯ ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಇಬ್ಬರೂ ಪ್ರಾಮಾಣಿಕ ಅಧಿಕಾರಿಗಳಾಗಿದ್ದರೆ ತನಿಖೆಗೆ ಯಾಕೆ ಹೆದರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ತನ್ನ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಗ ದೂರು ದಾಖಲಿಸಿದ್ದಾನೆ, ಎಂಬುದು ಇಡೀ ಪ್ರಪಂಚಕ್ಕೆ ತಿಳಿದಿದೆ ಎಂದು ಅವರು ತಿಳಿಸಿದರು.