ರಾಜ್ಯ

ಮಹದಾಯಿ ಹೋರಾಟ ಮತ್ತಷ್ಟು ತೀವ್ರ, ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನ

Lingaraj Badiger
ಗದಗ: ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದ್ದು, ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಧರಣಿನಿರತ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಪಟ್ಟಣದಲ್ಲಿ ಸಾವಿರಾರು ರೈತರೊಂದಿಗೆ ಧರಣಿ ನಡೆಸುತ್ತಿದ್ದ ವಿದ್ಯಾರ್ಥಿಗಳಾದ ನಂದಿಶ್ ಹಾಗೂ ಸಂಗಮೇಶ್ ಚರಂತಿಮಠ ಎಂಬುವವರು ಇದ್ದಕ್ಕಿದ್ದಂತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಎಚ್ಚೆತ್ತುಕೊಂಡ ಇತರೆ ಪ್ರತಿಭಟನಾಕಾರರು ಹಾಗೂ ಪೊಲೀಸರು ಅವರಿಂದ ವಿಷದ ಬಾಟಲಿಯನ್ನು ಕಿತ್ತುಕೊಂಡಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ದಾಖಲಿಸಿದ್ದಾರೆ.
ನವಲಗುಂದದಲ್ಲಿ ನಿಷೇಧಾಜ್ಞೆ
ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಮಹದಾಯಿ ಹೋರಾಟ ಹಿಂಸಾತ್ಮಕ ರೂಪ ಪಡೆದಿದ್ದು, ಪ್ರತಿಭಟನಾಕಾರರು ಪಟ್ಟಣದ ಬಿಎಸ್ಎನ್ಎಲ್ ಕಚೇರಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಲವು ಸರ್ಕಾರಿ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ ಮತ್ತು ಕೋರ್ಟ್ ಗೆ ಹಾಲ್ ಗೆ ನುಗ್ಗಿ ಪಿಠೋಪಕರಣ ಧ್ವಂಸಗೊಳಿಸಿದ್ದಾರೆ.
ಪ್ರತಿಭಟನೆ ಹಿಂಸಾರೂಪ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಅವರು, ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ 7.65 ಟಿಎಂಸಿ ನೀರು ಬಳಕೆಗೆ ಅವಕಾಶ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧಿಕರಣ ಪೀಠ ಬುಧವಾರ ತಿರಸ್ಕರಿಸಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರೈತರು, ಕನ್ನಡಪರ ಸಂಘಟನೆಗಳು ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
SCROLL FOR NEXT