ಕೇಂದ್ರ ಸಚಿವ ಅನಂತ್ ಕುಮಾರ್ (ಸಂಗ್ರಹ ಚಿತ್ರ)
ನವದೆಹಲಿ: ಮಹದಾಯಿ ನದಿ ನೀರು ವಿಚಾರವಾಗಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕದ ಸಂಸದರೂ ಕೂಡ ಆಗಿರುವ ಅನಂತ್ ಕುಮಾರ್ ಅವರು, ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ ನಿಜ. ಆದರೆ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಅಂತಿಮವಲ್ಲ. ನಮ್ಮ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ನಾವು ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಕರ್ನಾಟಕದ ಪಾಲಿನ ನೀರನ್ನು ಪಡೆಯಲು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತೇವೆ. ಮಹದಾಯಿ ವಿಚಾರವಾಗಿ ನಾವೇನು ಸುಮ್ಮನೆ ಕುಳಿತಿಲ್ಲ. ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುತ್ತಿದ್ದು, ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ನೆರವು ನೀಡುತ್ತೇವೆ. ಹಲವು ವರ್ಷಗಳಿಂದ ಮಹದಾಯಿ ನದಿ ನೀರಿಗಾಗಿ ರೈತರು ಹೋರಾಟ ನಡೆಸುತ್ತಿದ್ದು, ಅವರ ಹೋರಾಟ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ಪಾಲಿನ ನೀರನ್ನು ಪಡೆಯಲು ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಪಕ್ಷಬೇಧ ಮರೆತು ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ರೂಪಿಸಬೇಕಾದ ಹೋರಾಟದ ರೂಪುರೇಷೆಯನ್ನು ಸಿದ್ಧಪಡಿಸುತ್ತೇವೆ ಎಂದು ಅನಂತ್ ಕುಮಾರ್ ಹೇಳಿದರು.
ಇದೇ ವೇಳೆ ಮಹದಾಯಿ ತೀರ್ಪು ವಿರೋಧಿಸಿ ಧಾರವಾಡದ ನವಲಗುಂದದ ರೈತರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಯಮನೂರು ಮತ್ತು ಗೌಡರ ಓಣಿ ಗ್ರಾಮಗಳಲ್ಲಿ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿದ ಅನಂತ್ ಕುಮಾರ್ ಅವರು, ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಯಾರೂ ಮಾಡಬಾರದು. ರೈತರ ಮೇಲಿನ ಹಲ್ಲೆ ಖಂಡನೀಯ. ಈ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಿಡಿಕಾರಿದರು.