ಬೆಂಗಳೂರು: ಕರ್ನಾಟಕ ಪೊಲೀಸರ ಸಮಸ್ಯೆಗಳ ಬಗೆಹರಿಸಲು ನ್ಯಾಯಾಲಯ ಮದ್ಯಪ್ರವೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕರ್ನಾಟಕ ರಾಜ್ಯ ಪೊಲೀಸರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜೂನ್ 4ರಂದು ಸಾಮೂಹಿಕ ರಜೆ ಹಾಕಲು ನಿರ್ಧರಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಪೊಲೀಸರು ಇಟ್ಟಿರುವ 35 ಬೇಡಿಕೆಗಳಲ್ಲಿ 12 ಬೇಡಿಕೆಗಳ ಈಡೇರಿಕೆಗೆ ಸಮ್ಮತಿಸಿದೆ.
ವಕೀಲ ಎನ್ ಪಿ ಅಮೃತೇಶ್ ಅವರು ಪೊಲೀಸರ ಬೇಡಿಕಗಳ ಈಡೇರಿಕೆ ಕುರಿತು ವಿಚಾರಣೆ ನಡೆಸಲು ಓರ್ವ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಪೊಲೀಸ್ ಇಲಾಖೆಯಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ. ಪೇದೆಗಳನ್ನು 16 ರಿಂದ 18 ಗಂಟೆಗಳ ಕಾಲ ದುಡಿಸಿಕೊಳ್ಳಲಾಗುತ್ತಿದೆ. ಸರಿಯಾಗಿ ರಜೆ ನೀಡುವುದಿಲ್ಲ. ಮೇಲಾಧಿಕಾರಿಗಳಿಂದ ಕಿರುಕುಳ ಸೇರಿ ಹಲವಾರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡದೇ, ಪೇದೆಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಜೂನ್ ನಾಲ್ಕರಂದು ಸಾಮೂಹಿಕ ರಜೆ ಹಾಕಲು ನಿರ್ಧರಿಸಿದ್ದಾರೆ. ಇದನ್ನು ಕಿಡಿಗೇಡಿಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ನ್ಯಾಯಾಲಯ ಮದ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು ಎಂದು ವಾದ ಮಂಡಿಸಿದ್ದರು.
ಕರ್ನಾಟಕ ರಾಜ್ಯ ಪೊಲೀಸ್ ಸಂಘದ ಅಧ್ಯಕ್ಷ ಶಶಿಧರ್ ಅವರನ್ನು ಬುಧವಾರ ರಾತ್ರಿ ಬಂಧಿಸಲಾಗಿದ್ದು, ಈವರೆಗೆ ಅವರ ಕುಂಟಬಕ್ಕೆ ಎಫ್ ಐಆರ್ ಕೂಡ ನೀಡಿಲ್ಲ ಎಂದು ಅವರು ಕೋರ್ಟ್ ಗೆ ತಿಳಿಸಿದ್ದರು. ವಾದಗಳನ್ನು ಆಲಿಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics