ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆ ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ನಡೆಸುತ್ತಿರುವ ಪ್ರತಿಭಟನೆ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಮರು ಪರೀಕ್ಷೆ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಎದುರು ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಪಲ್ಲವಿ ಆಕೃತಿ ಅವರು ಇಂದು ಕಚೇರಿಗೆ ಗೈರು ಆಗಿದ್ದರಿಂದ, ಮರು ಪರೀಕ್ಷೆ ಹಿಂಪಡೆಯುವ ಯಾವುದೇ ಸೂಚನೆ ಸಿಗಲಿಲ್ಲ.
ಕೋಲಾರ ಮತ್ತು ಬಳ್ಳಾರಿಯ ಎರಡು ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಯಾದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ನಡೆದ ರಸಾಯನಶಾಸ್ತ್ರ ಪರೀಕ್ಷೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ರದ್ದುಗೊಳಿಸಿದ್ದು, ಮಾರ್ಚ್ 29ಕ್ಕೆ ಮರು ಪರೀಕ್ಷೆಗೆ ಆದೇಶಿಸಿದೆ. ಆದರೆ ಮರು ಪರೀಕ್ಷೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ನಿನ್ನೆ ಪಿಯು ಬೋರ್ಡ್ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.