ರಾಜ್ಯ

ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಜಗದೀಶ್ ಶೆಟ್ಟರ್

Sumana Upadhyaya

ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆಗೊಂಡು ಎರಡನೇ ಸಲ ಪರೀಕ್ಷೆ ಮುಂದೂಡಿದಕ್ಕೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಸೇರಿದಂತೆ ಹಲವು ಪಕ್ಷಗಳು, ಸಂಘಟನೆಗಳು, ವಿದ್ಯಾರ್ಥಿಗಳು ಸರ್ಕಾರ ಹಾಗೂ ಪಿಯು ಮಂಡಳಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿಧಾನಸಭೆಯ ಇಂದಿನ ಕಲಾಪ ಆರಂಭವಾಗುತ್ತಿದ್ದಂತೆ ಪಿಯು ಗದ್ದಲವೇ ಸದನದಲ್ಲಿ ಪ್ರತಿಧ್ವನಿಸಿತು. ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಚೆಲ್ಲಾಟವಾಡುತ್ತಿದೆ. ಪ್ರಶ್ನೆ ಪತ್ರಿಕೆ ಮತ್ತೆ ಮತ್ತೆ ಸೋರಿಕೆಯಾಗುತ್ತಿದೆಯೆಂದರೆ ಸರ್ಕಾರ ಪಿಯು ಇಲಾಖೆ ಯಾವ ರೀತಿ ಕಾರ್ಯ ನಿರ್ವಹಿಸುತ್ತಿದೆ, ಎಷ್ಟು ಬೇಜವಬ್ದಾರಿಯಾಗಿದೆ ಎಂಬುದು ಗೊತ್ತಾಗುತ್ತದೆ. ಇದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ತಕ್ಷಣವೇ ಪತ್ತೆ ಹಚ್ಚಬೇಕು ಎಂದರು.

ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಕಿಮ್ಮನೆ ರತ್ನಾಕರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆ ಸಣ್ಣ ಪುಟ್ಟ ವಿಚಾರವಲ್ಲ. ಇದರ ಹಿಂದೆ ದೊಡ್ಡ ಮಟ್ಟದ ಕೈವಾಡವಿದೆ. ಇದಕ್ಕೆ ಯಾರು ಕಾರಣ ಎಂಬುದನ್ನು ಸರ್ಕಾರ ತಕ್ಷಣವೇ ಕಂಡು ಹಿಡಿದು ಕ್ರಮ ಕೈಗೊಳ್ಳಬೇಕು. ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಸಭ್ಯತೆ, ಸಂಸ್ಕೃತಿ ಅನ್ನುವುದು ಇದ್ದರೆ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು.

ಎಲ್ಲೆಡೆ ಪ್ರತಿಭಟನೆ: ಎರಡನೇ ಬಾರಿಯೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ವಿದ್ಯಾರ್ಥಿಗಳಲ್ಲಿ ಆಕ್ರೋಶ, ಬೇಸರ ಮತ್ತು ಹತಾಶೆಯನ್ನು ಇನ್ನಷ್ಟು ಹೆಚ್ಚಿಸಿದೆ. ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಿಯು ಮಂಡಳಿ ಎದುರು ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸರು ವಿದ್ಯಾರ್ಥಿಗಳನ್ನು ತಡೆಯಲು ಹರಸಾಹಸ ಪಡುತ್ತಿದ್ದಾರೆ.

SCROLL FOR NEXT