ನವದೆಹಲಿ: ಮುಂಬರುವ ರಾಜ್ಯ ಸಭಾ ಚುನಾವಣೆ ಸಂಬಂಧ ಈಗಾಗಲೇ ನವದೆಹಲಿ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದಾರೆಂದು ಹೇಳಲಾಗುತ್ತಿದೆ.
ಇಂದು ಸಂಜೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರೊಂದಿಗೆ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಲಿದ್ದು, ಮಾತುಕತೆ ವೇಳೆ ಚುನಾವಣೆ ಕುರಿತಂತೆ ಚರ್ಚೆ ನಡೆಸಿದ ಬಳಿಕ ಹೈಕಮಾಂಡ್ ಸೂಚನೆ ಮೇರೆಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆಂದು ಹೇಳಲಾಗುತ್ತಿದೆ.
ಇನ್ನೂ ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ದಿಗ್ವಿಜಯ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಲಿದ್ದು, ಮಾತುಕತೆಯ ಬಳಿಕ ಸಂಜೆ ಸೋನಿಯಾ ಗಾಂಧಿ, ರಾಹುಲ್ ರೊಂದಿಗೆ ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಇನ್ನು ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲು ಹೈಕಮಾಂಡ್ ಗೆ ಬಿಡಲು ನಿರ್ಧರಿಸಿರುವ ನಾಯಕರು, ಶಾಸಕರ ಬಲದ ಆಧಾರದಲ್ಲಿ ರಾಜ್ಯ ಕಾಂಗ್ರೆಸ್ ಎರಡು ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದಾಗಿದೆ.
ಇದರಲ್ಲಿ ಆಸ್ಕರ್ ಫರ್ನಾಂಡೀಸ್ ಮತ್ತು ಜೈರಾಂ ರಮೇಶ್ ಹೆಸರುಗಳು ಮುಂಚೂಣಿಯಲ್ಲಿವೆ ಎಂದು ಹೇಳಲಾಗುತ್ತಿದೆ. 3ನೇ ಸ್ಥಾನಕ್ಕೆ ಕಾಂಗ್ರೆಸ್ ಗೆ 15 ಮತಗಳು ಕಡಿಮೆಯಾಗಲಿದ್ದು, 5 ಸಹಸದಸ್ಯರು ಹಾಗೂ ಕೆಲವು ಜೆಡಿಎಸ್ ಶಾಸಕರ ಮತಗಳ ಮೇಲೆ ಕಣ್ಣಿಟ್ಟಿದೆ. 3ನೇ ಅಭ್ಯರ್ಥಿಯಾಗಿ ನಿವೃತ್ತ ಪೊಲೀಸ್ ಅಧಿಕಾರಿ ಕೆ.ಸಿ. ರಾಮಮೂರ್ತಿ ಅವನ್ನು ಕಣಕ್ಕೆ ಇಳಿಸುವುದು ಬಹುತೇಕ ಖಚಿತವಾಗಿದೆ.
ಇದರಂತೆ ಬಹು ನಿರೀಕ್ಷಿತ ಸಚಿವ ಸಂಪುಟ ಪುನಾರಚನೆ ಮತ್ತೆ ಮರೀಚಿಕೆಯಾಗಿದ್ದು, ಅಕಾಂಕ್ಷಿ ಶಾಸಕರ ಕಣ್ಣು ಕೆಂಪಗಾಗುವಂತೆ ಮಾಡಿದೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದರಲ್ಲಿ ರಾಜ್ಯ ಸರ್ಕಾರ ಕಾರ್ಯನಿರತವಾಗಿದ್ದು, ಈ ಸಂದರ್ಭದಲ್ಲಿ ಸಂಪುಟ ಪುನಾರಚನೆ ನಡೆಯುವುದು ಸಂಶಯವಾಗಿದೆ ಎಂದು ಹೇಳಲಾಗುತ್ತಿದೆ.