ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಗೇಟ್ ಬಳಿ ಬುಧವಾರ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ ಇದೀಗ ಎರಡಕ್ಕೇರಿದೆ.
ಕಾಮಗಾರಿ ವೇಳೆ ಏಕಾಏಕಿ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಐದು ಅಗ್ನಿ ಶಾಮಕ ದಳದ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಈಗಗಾಲೇ 8 ವರ್ಷದ ಓರ್ವ ಬಾಲಕ ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನೂ ನಾಲ್ವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಕಟ್ಟಡ ಕುಸಿಯುವುದಕ್ಕೂ ಮುನ್ನ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂತು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಟ್ಟಡದಲ್ಲಿ 20ಕ್ಕೂ ಅಧಿಕ ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ. ಪ್ರಸ್ತುತ ನಾಲ್ಕು ಮಂದಿಯನ್ನು ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಜಿ.ಪದ್ಮಾವತಿ ಅವರು ಭೇಟಿ ನೀಡಿದ್ದು, ಪರಿಶೀಲನೆ ನಂತರ ಈ ಕಟ್ಟಡ ವಿನಯ್ ಕುಮಾರ್ ಧೋಂಗಲೆ ಎಂಬುವವರಿಗೆ ಸೇರಿದ್ದು, ಯಾರೇ ಆಗಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.