ಬೆಂಗಳೂರು: 61ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ರಾಜ್ಯಾದ್ಯಂತ ಕನ್ನಡ ಪರ ಸಂಘಟನೆಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ರಾಜಧಾನಿ ಬೆಂಗಳೂರು, ಬೆಳಗಾವಿ ಸೇರಿದಂತೆ ವಿವಿಧೆಡೆ ಬೃಹತ್ ಮೆರವಣಿಗೆ ನಡೆಸಲಾಗುತ್ತಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಕನ್ನಡ ಹಾಗೂ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಗೌರವ ಸೂಚಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ವಿವಿಧ ಶಾಲಾ-ಕಾಲೇಜುಗಳ ಕಲಾ ತಂಡಗಳು ವಿಶೇಷ ಪ್ರದರ್ಶನ ನೀಡಿದವು.
ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಸುಮಾರು 100 ಅಧಿಕ ಕಲಾ ತಂಡಗಳು ಬೆಳಗಿನಿಂದ ಸಂಜೆ ವರೆಗೂ ಬೃಹತ್ ಮೆರವಣಿಗೆಯನ್ನು ಹಮ್ಮಿಕೊಂಡಿವೆ. ಸ್ಥಳೀಯ ಶಾಲಾ-ಕಾಲೇಜುಗಳು ಸೇರಿದಂತೆ 100ಕ್ಕೂ ಹೆಚ್ಚು ಕಲಾತಂಡಗಳು ಸ್ಥಬ್ಧಚಿತ್ರ ಪ್ರದರ್ಶನ ನಡೆಸುತ್ತಿವೆ. ಇನ್ನು ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜು ಅವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ವಿವಿಧ ಕಾಲ ತಂಡಗಳು ಪಥ ಸಂಚಲನ ಹಾಗೂ ಮೆರವಣಿಗೆ ನಡೆಸಿದವು.
ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಅವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಜಿಲ್ಲಾ ಪೊಲೀಸರು ಪಥ ಸಂಚಲನ ನಡೆಸಿ ಗೌರವ ಸಲ್ಲಿಸಿದರು.