ಕಾನೂನು ಸಚಿವ ಟಿ.ಬಿ.ಜಯಚಂದ್ರ
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ(ಜಿಎಸ್ ಟಿ ಬಿಲ್) ಅನುಮೋದನೆ ನೀಡಲು ಸೆಪ್ಟೆಂಬರ್ 14 ರಂದು ಕರೆಯಲಾಗಿದ್ದ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಮುಂದೂಡಲು ಶನಿವಾರ ನಡೆದ ಸಚಿವ ಸಂಪುಟ ಸಮ್ಮತಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಸಂಸತ್‍ನಲ್ಲಿ ಅಂಗೀಕಾರವಾಗಿರುವ ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ 17 ರಾಜ್ಯಗಳು ಈಗಾಗಲೇ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಅಂಕಿತ ಹಾಕಿರುವುದರಿಂದ ಈ ಮಸೂದೆಯು ಕಾನೂನು ಆಗಿದೆ. ಈ ಸಂದರ್ಭದಲ್ಲಿ ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಕಾನೂನಿಗೆ ಅನುಮೋದನೆ ನೀಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸೆಪ್ಟೆಂಬರ್ 14 ರಂದು ಕರೆದಿರುವ ರಾಜ್ಯ ವಿಧಾನ ಮಂಡಲದ ಅಧಿವೇಶನವನ್ನು ಮುಂದೂಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ತೀರ್ಮಾನಿಸಿದೆ ಎಂದು ಹೇಳಿದರು.