ಮೈಸೂರು: ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಂದು ಉದ್ಯಮ ಚೇತರಿಸಿಕೊಳ್ಳುತ್ತದೆಂಬ ಭರವಸೆಯಲ್ಲಿದ್ದ ಹೊಟೇಲ್ ಮಾಲೀಕರಿಗೆ ಸುಪ್ರೀಂ ಕೋರ್ಟ್ ಆದೇಶ ಆಘಾತ ನೀಡಿದೆ.
ತಮಿಳುನಾಡಿಗೆ ಕರ್ನಾಟಕ ಆರು ದಿನ ಆರು ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಶುಕ್ರವಾರ ಕೋರ್ಟ್ ಆದೇಶ ನೀಡಿದ ಮೇಲೆ ಮೈಸೂರು ಹಾಗೂ ಮಂಡ್ಯದ ಕೆಲ ಭಾಗಗಳಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಕೆಲವೆಡೆ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು.
ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ಸಾವಿರಾರು ಪ್ರವಾಸಿಗರು ಬರುತ್ತಿದ್ದರು. ಆದರೆ ಸುಪ್ರೀಂ ಕೋರ್ಟ್ ಕರ್ನಾಟಕ ವಿರುದ್ಧ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಹಿಂಸಾಚಾರ, ಗಲಭೆ ಸಂಭವಿಸಬಹುದೆಂಬ ಭಯದಿಂದ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.
ಪಾಂಡವಪುರ ಮತ್ತು ಶ್ರೀರಂಗ ಪಟ್ಟಣಗಳ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ ಕಾವೇರಿ ಹೋರಾಟಗಾರರು, ಸುಪ್ರೀಂ ಕೋರ್ಟ್ ರೈತರ ವಿರುದ್ಧ ಮರಣ ಶಾಸನ ವಿಧಿಸಿದೆ ಎಂದು ಘೋಷಣೆ ಕೂಗಿದರು. ಜೊತೆಗೆ ಕಾವೇರಿ ನೀರು ನಿರ್ವಹಣ ಮಂಡಳಿ ರಚನೆ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮೈಸೂರಿನಲ್ಲಿ ಅರೆ ಬೆತ್ತಲೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಕೂಡಲೇ ಮಧ್ಯವಸ್ಥಿಕೆ ವಹಿಸಬೇಕು ಎಂಗು ಆಗ್ರಹಿಸಿದರು.
ಇನ್ನೂ ಸುಪ್ರೀಂ ಕೋರ್ಟ್ ನ ತೀರ್ಪಿಗೆ ಪ್ರತಿಕ್ರಿಯಿಸಿರುವ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ, ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡಬಾರದು. ವಿಧಾನ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಬದ್ಧವಾಗಿರಬೇಕು ಎಂದು ಅವರು ಆಗ್ರಹಿಸಿದ್ದಾರೆ.