ಧಾರವಾಡ: ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಹಾಗೂ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಂಗಳವಾರ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.
ವೀಣಾ ಅವರು ನಕಲಿ ಜಾತಿ ಪ್ರಮಾಣಪತ್ರ ನೀಡಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಹುದ್ದೆ ಅಲಂಕರಿಸಿದ್ದಾರೆ ಎಂದು ಆರೋಪಿಸಿ ಶೈಲಾ ನಾಡಗೌಡ ಮತ್ತು ವೀರೇಶ ಎಂಬುವವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ವೀಣಾ ಕಾಶಪ್ಪನವರ ಸಲ್ಲಿಸಿದ್ದ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.
ಈ ಹಿಂದೆ ರಿಟ್ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಆದರೆ ಶೈಲಾ ನಾಡಗೌಡ ಮತ್ತು ವೀರೇಶ ಅವರು ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ ಕೊಠಾರಿ ಹಾಗೂ ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ಪೀಠ ಮೇಲ್ಮನವಿಯನ್ನು ಪುರಸ್ಕರಿಸಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬನ್ನೂರ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಗಳಿಸಿದ್ದ ವೀಣಾ ಕಾಶಪ್ಪನವರ್ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು. ಅಧ್ಯಕ್ಷರಾಗುವ ಸಂದರ್ಭದಲ್ಲಿ ತಹಶೀಲ್ದಾರ್ ಮೇಲೆ ಪ್ರಭಾವ ಬೀರಿ ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು.