ಬಸ್ ಮೇಲೆ ಕಲ್ಲು ತೂರಾಟ ನಡೆಸಲು ಯತ್ನಿಸಿದವರನ್ನುಚದುರಿಸುತ್ತಿರುವ ಪೊಲೀಸರು
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವು ಮಂದಿಯನ್ನು ಬಂಧಿಸಲಾಗಿದೆ.
ಕೊಲೆಯತ್ನ ಪ್ರಕರಣದಲ್ಲಿ ಬಂಧಿತನಾಗಿರುವ ಯುವಕನೊಬ್ಬನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಮಂಗಳವಾರ ಬೆಳಿಗ್ಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಈ ವೇಳೆ ಪಿಎಫ್‌ಐ ಕಾರ್ಯಕರ್ತರು, ಸಂಚಾರ ತಡೆದು, ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿದರು. ತೆರವು ಮಾಡಲು ಯತ್ನಿಸಿದ ಪೊಲೀಸರ ಮೇಲೂ ಹಲ್ಲೆ ನಡೆಸಿದರು. ಘಟನೆ ಸಂಬಂಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ 98 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರ ವಿರುದ್ಧ ಅಕ್ರಮ ಗುಂಪು ಸೇರುವುದು, ದೊಂಬಿ, ಮಾರಕಾಸ್ತ್ರ ಹಿಡಿದು ದೊಂಬಿ ನಡೆಸಿರುವುದು, ಸರ್ಕಾರಿ ನೌಕರರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು, ಹಲ್ಲೆ ನಡೆಸಿರುವುದು, ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ಹಲ್ಲೆ, ಮಹಿಳೆಯ ಗೌರವಕ್ಕೆ ಚ್ಯುತಿ ತರುವ ಉದ್ದೇಶದಿಂದ ಹಲ್ಲೆ ನಡೆಸಿರುವುದು, ಶಾಂತಿ ಕದಡುವ ಉದ್ದೇಶದಿಂದ ನಿಂದನೆ ಮಾಡಿರುವುದು, ಶಾಂತಿಭಂಗಕ್ಕೆ ಪ್ರಚೋದನೆ ನಡೆಸಿರುವುದು ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿರುವ ಆರೋಪದಡಿ ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.