ಬೆಂಗಳೂರು: ಕೊಡಗು ಜಿಲ್ಲೆಯ ದಿಡ್ಡಳ್ಳಿ ನಿರಾಶ್ರಿತ ಆದಿವಾಸಿಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಆದಿವಾಸಿಗಳಿಗೆ ಮರುವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ದಿಡ್ಡಳ್ಳಿ ನಿರಾಶ್ರಿತ ಆದಿವಾಸಿಗಳಿಗೆ ಪುನರ್ವಸತಿ ಸೌಕರ್ಯ ಕಲ್ಪಿಸುವ ಕುರಿತು ಚರ್ಚೆಸಲು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಕರೆದಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.
ಕೊಡಗು ಜಿಲ್ಲೆ ದಿಡ್ಡಳ್ಳಿಯ ನಿರಾಶ್ರಿತರ ಪುನರ್ವಸತಿ ಹೊಣೆಯನ್ನು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ವಹಿಸಲಾಗಿದೆ. ಇದಕ್ಕಾಗಿ ಕಾಗೋಡು ತಿಮ್ಮಪ್ಪ ಮತ್ತು ಅರಣ್ಯ ಸಚಿವ ರಮಾನಾಥ ರೈ ಅವರು ಇದೇ ತಿಂಗಳ 17 ಮತ್ತು 18ರಂದು ಸ್ಥಳದಲ್ಲೇ ವಾಸ್ತವ್ಯ ಹೂಡಿ ಸಮಸ್ಯೆ ಕುರಿತು ಅಧ್ಯಯನ ನಡೆಸಲಿದ್ದಾರೆ. ಸಚಿವರು ಅಲ್ಲಿಗೆ ಹೋಗಿ ಬಂದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಕಾಗೋಡು ತಿಮ್ಮಪ್ಪ ಅವರು, ನಿರಾಶ್ರಿತರು ವಾಸಿಸುತ್ತಿದ್ದ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಕಂದಾಯ ಇಲಾಖೆಯದ್ದು ಎಂದು ನಿರಾಶ್ರಿತರು ಪ್ರತಿಪಾದಿಸುತ್ತಿದ್ದಾರೆ. ಕಂದಾಯ ಇಲಾಖೆಗೆ ಸೇರಿದ್ದೇ ಆದರೆ, 15 ದಿನಗಳೊಳಗಾಗಿ ಹಕ್ಕು ಪತ್ರ ನೀಡಿ, ಮನೆ ಕಟ್ಟಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ದಾಖಲೆಗಳ ಪ್ರಕಾರ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದೇ ಆಗಿದ್ದರೆ, ಅಲ್ಲಿ ಪುನರ್ವಸತಿ ಕಲ್ಪಿಸಲು ಸಾಧ್ಯವಾಗುವುದಿಲ್ಲ. ಸಮಸ್ಯೆಗೆ ಪರ್ಯಾಯ ಮಾರ್ಗಗಳನ್ನು ಹುಡುಕಲಾಗುತ್ತದೆ. ಆದಿವಾಸಿಗಳಿಗೆ ಆಧಾರ್ ಕಾರ್ಡ್ ಹಾಗೂ ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಾಫಿ ಪ್ಲಾಂಟೇಶನ್ ಗಳಲ್ಲಿ ಜೀತ ಪದ್ಧತಿ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜೀತಪದ್ಧತಿಯನ್ನು ನಿಷೇಧಿಸಿ ಕಾನೂನು ಜಾರಿಯಾಗಿ ಇಷ್ಟು ವರ್ಷ ಕಳೆದರೂ ಇನ್ನೂ ಜೀತ ಪದ್ಧತಿ ಮುಂದುವರಿದಿರುವುದು ನಾಚಿಕೆಗೇಡು. ಈ ಬಗ್ಗೆ ಸರ್ಕಾರ ಕೂಡಲೇ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಪ್ರದೇಶದ ಒತ್ತುವರಿ ಆರೋಪದ ಮೇರೆಗೆ ಡಿ.7ರಂದು ಅರಣ್ಯ ಇಲಾಖೆಯ ಸಿಬ್ಬಂದಿಗಳು 588 ಗುಡಿಸಲುಗಳನ್ನು ಜೆಸಿಬಿಯೊಂದಿಗೆ ತೆರವು ಮಾಡಿದ್ದರು. ಇದನ್ನು ಖಂಡಿಸಿ ಆದಿವಾಸಿಗ ಮಹಿಳೆ ಹಾಗೂ ಪುರುಷರೊಬ್ಬರು ಬೆತ್ತಲೆ ಪ್ರತಿಭಟನೆಯನ್ನು ನಡೆಸಿದ್ದರು. ತೆರವು ಬಳಿಕ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆಂಬ ಆರೋಪದ ಮೇರೆಗೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಇದು ಅರಣ್ಯದ ಜಾಗವಲ್ಲ. ನಾವು ಹಲವು ವರ್ಷಗಳಿಂದರೂ ಇದೇ ಜಾಗದಲ್ಲಿ ನೆಲೆಯೂರಿದ್ದೇವೆ ಎಂದು ಹೇಳಿ ಆದಿವಾಸಿಗಳು ಪ್ರತಿಭಟನೆ ನಡೆಸಿದ್ದವು.