ಬೆಂಗಳೂರು: ಗೋವಾದಲ್ಲಿ ವಿಧಾನಸಭೆ ಉಪ ಚುನಾವಣೆ ಮಗಿದಿದ್ದು ಬಿಜೆಪಿ ಗೆಲುವು ಸಾಧಿಸಿದೆ. ಮಹಾದಾಯಿ ನದಿ ನೀರು ಹಂಚಿಕೆ ಸಂಬಂಧ ಉಂಟಾಗಿರುವ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಲು ಬಿಜೆಪಿ ಮುಂದಾಗಿದೆ.
ಮಹಾದಾಯಿ ನದಿ ನೀರಿನ ವ್ಯಾಜ್ಯವನ್ನು ಮಾತುಕತೆ ಮೂಲಕ ಬಗೆಹರಿಸಲು ಗೋವಾ ಮತ್ತು ಮಹಾರಾಷ್ಟ್ರಕ್ಕೆ ನಿಯೋಗ ಕರೆದೊಯ್ಯಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.
ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ಜತೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ರಾಜ್ಯ ಘಟಕದ ಪ್ರಮುಖರು ಇರುವ ನಿಯೋಗದಲ್ಲಿ ಅಲ್ಲಿಗೆ ತೆರಳಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಅವರ ಮನವೊಲಿಸಲಾಗುವುದು ಎಂದು ತಿಳಿಸಿದ್ದಾರೆ.
ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಯಡಿಯೂರಪ್ಪ, ಕೇಂದ್ರ ಸತಿವರುಗಳಾದ ಡಿವಿ ಸದಾನಂದಗೌಡ, ಅನಂತ ಕುಮಾರ್ ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನಿಯೋಗದಲ್ಲಿರಲಿದ್ದಾರೆ.
ಎರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ನಿಯೋಗ ನೀರಿನ ಪರಿಸ್ಥಿತಿಯನ್ನು ವಿವರಿಸಿ ಸಂದರ್ಭವನ್ನು ಅರ್ಥ ಮಾಡಿಕೊಳ್ಳುವಂತೆ ಮನವಿ ಮಾಡುವುದಾಗಿ ಎಂದು ಹೇಳಿದ್ದಾರೆ.
ಎರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಮನವೊಲಿಸಲು ಪ್ರಯತ್ನಿಸುವುದಾಗಿ ಹೇಳಿರುವ ಯಡಿಯೂರಪ್ಪ, ಎರಡು ರಾಜ್ಯಗಳ ಕಾಂಗ್ರೆಸ್ ಪಕ್ಷದ ಮುಖಂಡರ ಮನವೊಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸುವುದಾಗಿ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಈ ಸಂಬಂಧ ಅವರೊಂದಿಗೆ ಚರ್ಚಿಸಲಾಗಿತ್ತು. ಶಾ ಗ್ರೀನ್ ಸಿಗ್ನಲ್ ನಂತರ ಯಡಿಯೂರಪ್ಪ ಮಹಾದಾಯಿ ಬಿಕ್ಕಟ್ಟು ಸಂಬಂಧ ಮಾತುಕತೆಗೆ ಮುಂದಾಗಿದ್ದಾರೆ.
ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹಾದಾಯಿ ನದಿ ನೀರಿನ ಹಂಚಿಕೆ ವಿಷಯವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದರಿಂದ 2018ರ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಗೆ ವರದಾನವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.