ರಾಜ್ಯ

ಬೆಂಗಳೂರು: ಸನ್ನಿ ಲಿಯೋನ್ ಹೊಸ ವರ್ಷಾಚರಣೆ ಕಾರ್ಯಕ್ರಮಕ್ಕೆ ಅನುಮತಿ ನೀಡದಿರಲು ಸರ್ಕಾರ ನಿರ್ಧಾರ

Srinivasamurthy VN
ಬೆಂಗಳೂರು: ಬಾಲಿವುಡ್ ನಟಿ ಸನ್ನಿ ಲಿಯೋನ್ ರ ಬೆಂಗಳೂರು ಅಭಿಮಾನಿಗಳಿಗೆ ಬೆಂಗಳೂರು ಪೊಲೀಸರು ಭಾರಿ ನಿರಾಶೆ ಮಾಡಿದ್ದು, ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಆಯೋಜನೆಯಾಗಿದ್ದ ಸನ್ನಿಲಿಯೋನ್  ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ.
ಡಿಸೆಂಬರ್ 31ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಿರಲಿ ಎಂಬ ಕಾರಣಕ್ಕಾಗಿ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ  ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನು ಇದೇ ಡಿಸೆಂಬರ್ 31ರ ರಾತ್ರಿ ಮಾನ್ಯತಾ ಟೆಕ್ ಪಾರ್ಕ್ ನ ವೈಟ್ ಆರ್ಕಿಡ್‌ ನಲ್ಲಿ ನಲ್ಲಿ ಬಹುರಾಷ್ಟ್ರೀಯ ಕಂಪೆನಿಯಾದ ಟೈಮ್ಸ್ ಕ್ರಿಯೇಷನ್ ಸಂಸ್ಥೆ ಸನ್ನಿ ಲಿಯೋನ್  ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಆದರೆ ಈ ಕಾರ್ಯಕ್ರಮಕ್ಕೆ ನಗರ ಪೊಲೀಸ್ ಆಯುಕ್ತರು ಅನುಮತಿ ನಿರಾಕರಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಡಿಸೆಂಬರ್ 31 ರ ರಾತ್ರಿ ಕೆಲ ಕಿಡಿಕೇಡಿಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಆತಂಕವಿದ್ದು, ಇದೇ ಕಾರಣಕ್ಕೆ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ  ಎಂದು ಬೆಂಗಳೂರು ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಅಂತೆಯೇ ಡಿಸೆಂಬರ್ 31ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಕಾರ್ಯಕ್ರಮಕ್ಕಾಗಿ ಬೆಂಗಳೂರಿನ ಎಲ್ಲ ಪೊಲೀಸರನ್ನು ಭದ್ರತೆಗಾಗಿ  ನಿಯೋಜಿಸಲು ನಿರ್ಧರಿಸಲಾಗಿದೆ. ಅಂತೆಯೇ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಅವರು ಇದೇ ವೇಳೆ ಎಚ್ಚರಿಕೆ ನೀಡಿದರು.
ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಗೃಹ ಸಚಿವ ರಾಮ ಲಿಂಗಾ ರೆಡ್ಡಿ ಅವರು ನಗರದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಸಂಬಂಧ ಕೋರ್ಟ್ ಕೂಡ ನಿರ್ದೇಶನ ನೀಡಿದೆ. ಅದರಂತೆ ಪೊಲೀಸರು ಕಾನೂನು ಸುವ್ಯವಸ್ಥೆಗೆ  ಧಕ್ಕೆಯಾಗಬಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಬಹುದಾಗಿದೆ ಎಂದು ಹೇಳಿದರು. ಅಲ್ಲದೆ ಇತ್ತೀಚೆಗೆ ನಟಿ ಸನ್ನಿ ಲಿಯೋನ್ ಕೇರಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದಿತ್ತು. ಹೀಗಾಗಿ ಸನ್ನಿ  ಲಿಯೋನ್ ಅವರ ಬೆಂಗಳೂರು ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದರು.
ಇನ್ನು ಬಾಲಿವುಡ್ ಮಾದಕ ನಟಿ ಸನ್ನಿ ಲಿಯೋನ್ ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
SCROLL FOR NEXT