ಕಲಬುರ್ಗಿ: ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಲು ರಾಜ್ಯದ 760 ಹೋಬಳಿಗಳಲ್ಲಿ ‘ಕರ್ನಾಟಕ ಪಬ್ಲಿಕ್ ಶಾಲೆ’ ಹೆಸರಿನಲ್ಲಿ ಮಾದರಿ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಬುಧವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತನ್ವೀರ್ ಸೇಠ್, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ಕಾಲೇಜಿನವರೆಗೆ ಒಂದೇ ಸೂರಿನಡಿ ಶಿಕ್ಷಣ ಒದಗಿಸುವುದು ಸರ್ಕಾರದ ಗುರಿಯಾಗಿದ್ದು, ಮುಂದಿನ ಬಜೆಟ್‌ನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅನುದಾನ ಒದಗಿಸಲಾಗುವುದು ಎಂದರು.
ರಾಜ್ಯದಲ್ಲಿ 36 ಸಾವಿರ ಶಾಲೆಗಳು ಶಿಥಿಲಗೊಂಡಿದ್ದು, ಅವುಗಳನ್ನು ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸಬೇಕಾಗಿದೆ. 31 ಸಾವಿರ ಶಾಲೆಗಳನ್ನು ಭಾಗಶಃ ದುರಸ್ತಿ ಮಾಡಬೇಕಾಗಿದೆ. 19 ಸಾವಿರ ಹೊಸ ಕೊಠಡಿಗಳನ್ನು ನಿರ್ಮಿಸುವ ಅಗತ್ಯವಿದ್ದು, ಇದಕ್ಕಾಗಿ 566 ಕೋಟಿ ರುಪಾಯಿ ಅನುದಾನ ಮೀಸಲಿರಿಸಲಾಗಿದೆ ಎಂದು ತನ್ವೀರ್ ಸೇಠ್ ವಿವರಿಸಿದ್ದಾರೆ.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಂ (ಕೆಎಸ್‌ಇಎಸ್) ಕಾಯ್ದೆಯನ್ನು ಎರಡೂ ಸದನಗಳಲ್ಲಿ ಮಂಡಿಸಲಾಗಿದೆ. ಈ ಬಗ್ಗೆ ಶೀಘ್ರವೇ ಕಾನೂನು ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಇದೇ ವೇಳೆ ಪರೀಕ್ಷೆಯಲ್ಲಿ ನಕಲು ಮತ್ತು ಅಕ್ರಮ ತಡೆಗಟ್ಟಲು ಸರ್ಕಾರ ಸಾಕಷ್ಟು ಕ್ರಮಕೈಗೊಂಡಿದ್ದು, ಫಲಿತಾಂಶ ವೃದ್ಧಿಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತನ್ವೀರ್ ಸೇಠ್ ಹೇಳಿದ್ದಾರೆ.