ರಾಜ್ಯ

ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಿ: ಕೇಂದ್ರಕ್ಕೆ ಕೆಡಿಎ ಒತ್ತಾಯ

Sumana Upadhyaya
ಬೆಂಗಳೂರು: ಆಡಳಿತದಲ್ಲಿ ಕನ್ನಡ ಭಾಷೆ ಜಾರಿಗೆ ಒತ್ತು ನೀಡುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ನೇಮಕಾತಿಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಪ್ರಾಧಾನ್ಯತೆ ನೀಡಲು ಬ್ಯಾಂಕಿಂಗ್ ಸಿಬ್ಬಂದಿ ವಿಭಾಗ ಸಂಸ್ಥೆ(ಐಬಿಪಿಎಸ್) ನಿಯಮಗಳಿಗೆ ತಿದ್ದುಪಡಿ ತರಬೇಕೆಂದು ಒತ್ತಾಯಪಡಿಸಿದೆ. 
ಐಬಿಪಿಎಸ್ ಅನುಸರಿಸುವ ಕೇಂದ್ರೀಯ ನೇಮಕಾತಿ ವ್ಯವಸ್ಥೆ ಒಕ್ಕೂಟ ವ್ಯವಸ್ಥೆಯಲ್ಲಿ ಸಾಂವಿಧಾನಿಕ ತತ್ವಗಳನ್ನು ಉಲ್ಲಂಘಿಸುತ್ತದೆ. ಕರ್ನಾಟಕದಲ್ಲಿ ಅಥವಾ ಬೇರೆ ರಾಜ್ಯಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಅಲ್ಲಿನ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಅವಕಾಶ ನೀಡದೆ ಬೇರೆ ರಾಜ್ಯಗಳ ಅಭ್ಯರ್ಥಿಗಳಿಗೆ ಅವಕಾಶ ನೀಡಿ ಸ್ಥಳೀಯರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತದೆ. ಬೇರೆ ರಾಜ್ಯಗಳಿಂದ ಬರುವ ಅಭ್ಯರ್ಥಿಗಳು ಸ್ಥಳೀಯ ಭಾಷೆಯನ್ನು ಕಲಿಯುವ ಔದಾರ್ಯವನ್ನು ತೋರುವುದಿಲ್ಲ. ಇದರಿಂದ ಅನಕ್ಷರಸ್ಥರಿಗೆ ಬ್ಯಾಂಕುಗಳಲ್ಲಿ ಸಿಬ್ಬಂದಿ ಜೊತೆ ವ್ಯವಹರಿಸಲು ಕಷ್ಟವಾಗುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ, ಕನ್ನಡ ಬರಹಗಾರ ಸಿದ್ದಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮನು ಬಳಿಗಾರ್, ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮತ್ತು ಕನ್ನಡ ಸಾಹಿತಿ ಎಲ್. ಹನುಮಂತಯ್ಯ ಈ ಸಂಬಂಧ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. 
ಬ್ಯಾಂಕು ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಸ್ಥಳೀಯ ಭಾಷೆ ಕಡ್ಡಾಯವಾಗಿ ತಿಳಿದಿರಬೇಕು ಎಂಬ ನಿಯಮವನ್ನು ಜಾರಿಗೆ ತರಬೇಕೆಂದು ಐಬಿಪಿಎಸ್ ಗೆ ಸೂಚಿಸಬೇಕೆಂದು ನಿಯೋಗ ಸಚಿವರನ್ನು ಒತ್ತಾಯಿಸಿದೆ.
SCROLL FOR NEXT