ಹಾಸನ/ಮೈಸೂರು: ಬಹು ನಿರೀಕ್ಷಿತ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನದ ಅರಸೀಕೆರೆಯಲ್ಲಿ 121 ಕೋಟಿ ರು ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ರಾಜಕೀಯ ಕಾರಣಗಳಿಗಾಗಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದೆ. ಆದರೆ ಈ ಯೋಜನೆಯಿಂದ ನೆರೆರಾಜ್ಯ ತಮಿಳುನಾಡಿಗೂ ಉಪಯೋಗವಾಗಲಿದೆ ಎಂದು ಅವರು ಹೇಳಿದ್ದಾರೆ.
ಮೇಕೆದಾಟು ಯೋಜನೆಗಾಗಿ ಸರ್ಕಾರ 5,900 ಕೋಟಿ ವೆಚ್ಚ ಮಾಡಲು ನಿರ್ಧರಿಸಿದೆ, ಯೋಜನೆ ರೂಪುರೇಷೆಯನ್ನು ಕೇಂದ್ರಕ್ಕೆ ಕಳುಹಿಸಿದ್ದು, ಕೇಂದ್ರ ಜಲಸಂಪನ್ಮೂಲ ಇಲಾಖೆಯ ಅನುಮೋದನೆಗಾಗಿ ಕಾಯಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನೂ ಮೈಸೂರಿನಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರ ಬಜೆಟ್ ನಲ್ಲಿ 5 ಸಾವಿರ ಕೋಟಿಯನ್ನು ಮೇಕೆದಾಟು ಯೋಜನೆಗೆ ಮೀಸಲಿಡಬೇಕು ಎಂದು ಆಗ್ರಹಿಸಿದ್ದಾರೆ.ಮೇಕೆದಾಟು ಯೋಜನೆಯಲ್ಲಿ ಸರ್ಕಾರ ಚುನಾವಣೆ ಗಿಮಿಕ್ ಮಾಡುವುದನ್ನು ಬಿಟ್ಟು, ರಾಜಕೀಯ ಬದ್ಧತೆ ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ