ಬೆಂಗಳೂರು: ರಾಜ್ಯ ಸರ್ಕಾರ ನಗರದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸಲು 6 ಸಾವಿರ ಕೋಟಿ ರುಪಾಯಿ ವೆಚ್ಚದ ಹೊಸ ಯೋಜನೆ ಕೇಂದ್ರ ಸರ್ಕಾರದ ನೆರವು ಕೇಳಿದೆ.
ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಅವರು ಈ ಸಂಬಂಧ ಇಂದು ವಿಧಾನಸೌಧದಲ್ಲಿ ಕೇಂದ್ರ ಸಚಿವ ಜಯಂತ್ ಸಿನ್ಹಾ ಅವರೊಂದಿಗೆ ಸಭೆ ನಡೆಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್ ಅವರು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 30 ಕಿ.ಮೀ.ಉದ್ದದ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸಿದ್ದೇನೆ. 6 ಸಾವಿರ ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಈ ಯೋಜನೆಗೆ ಜಯಂತ್ ಸಿನ್ಹಾ ಅವರು ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಕೇಂದ್ರದಿಂದ ಅನುಮತಿ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಜಾರಿಗೊಳ್ಳಲಿರುವ ಈ ಯೋಜನೆಗೆ ಶೇ.50:50ರ ಅನುಪಾತದಲ್ಲಿ ವೆಚ್ಚ ಭರಿಸಲಾಗುತ್ತದೆ.
ಈ ಯೋಜನೆಗೆ ಒಟ್ಟು ಆರು ಮಾರ್ಗಗಳನ್ನು ಗುರುತಿಸಿದ್ದೇವೆ. ಯಾವುದಾದರೂ ಒಂದು ಮಾರ್ಗವನ್ನು ಆಯ್ಕೆಮಾಡಲು ಸಾರ್ವಜನಿಕರ ಸಲಹೆ ಕೋರಲಾಗಿದ್ದು, ಮಾರ್ಗ ಅಂತಿಮಗೊಳಿಸಿದ ನಂತರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಾರ್ಜ್ ತಿಳಿಸಿದ್ದಾರೆ.