ಮಂಡ್ಯ: ಕೃಷ್ಣರಾಜ ಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ರೈತರು ಭಾನುವಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಕೆಆರ್ ಎಸ್ ಡ್ಯಾಂ ನಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ಲಾವಣ್ಯ ಅವರು ಪಿಟಿಐಗೆ ತಿಳಿಸಿದ್ದಾರೆ.
ರೈತರು ಗಜಲಗೇರೆ ಹಾಗೂ ಇಲವಾಳ ಗ್ರಾಮದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದು, ನೀರಿನ ಕೊರತೆ ಇದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿರುವುದಾಗಿ ಲಾವಣ್ಯ ಹೇಳಿದ್ದಾರೆ.
ಜನರು ಕುಡಿಯುವ ನೀರಿನ ಸಮಸ್ಯೆಯಿಂದ ತೊಂದರೆಗೀಡಾಗಿದ್ದಾರೆ. ಕಬಿನಿ, ಹೇಮಾವತಿ, ಕೆ.ಆರ್.ಎಸ್, ಹಾರಂಗಿ ಜಲಾಶಯಗಳಿಂದ ಜಿಲ್ಲೆಯ ನಾಲೆಗಳಿಗೆ ನೀರು ಹರಿಸಬೇಕು. ಕಾವೇರಿ ಸಲಹಾ ಸಮಿತಿ ಸಭೆ ನಡೆಸದೆ ತಮಿಳುನಾಡಿಗೆ ಸರ್ಕಾರ ನೀರು ಬಿಟ್ಟಿರುವುದನ್ನು ರೈತರು ಕ್ಷಮಿಸುವುದಿಲ್ಲ. ರೈತರ ಪರವಾಗಿದ್ದೇವೆ ಎಂದು ಹೇಳುತ್ತಲೇ ಸರ್ಕಾರ ರೈತರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.