ರೂಪಾ ಮತ್ತು ಸತ್ಯನಾರಾಯಣರಾವ್
ಬೆಂಗಳೂರು: ಸೇವಾ ನಿಯಮಗಳನ್ನು ಉಲ್ಲಂಘಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಂಬಂಧ ಬಂಧಿಖಾನೆ ಡಿಜಿಪಿ ಎಚ್.ಎನ್ ಸತ್ಯನಾರಾಯಣ ರಾವ್ ಮತ್ತು ಡಿಐಜಿ ರೂಪಾ ಅವರಿಗೆ ರಾಜ್ಯ ಗೃಹ ಇಲಾಖೆ ನೊಟೀಸ್ ನೀಡಿದೆ.
ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ಡಿಐಜಿ ರೂಪಾ ನೀಡಿರುವ ವರದಿಯನ್ನು ಮಾಧ್ಯಮಗಳಿಗೆ ನೀಡಿದ್ದ ಹಿನ್ನೆಲೆಯಲ್ಲಿ ನೊಟೀಸ್ ಜಾರಿ ಮಾಡಲಾಗಿದೆ.
ರೂಪಾ ಅವರ ವರದಿ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಅವರಿಂದ ತನಿಖೆ ನಡೆಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು ಕಾರಾಗೃಹ ಡಿಜಿಪಿ ಸತ್ಯನಾರಾಯಣ 2 ಕೋಟಿ ರು. ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನೂ ರೂಪಾ ಅವರಿಗೆ ನೊಟೀಸ್ ನೀಡಿರುವುದಕ್ಕೆ ಬಿಜೆಪಿ ಮುಖಂಡ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್ . ಆಶೋಕ್ ಅಸಮಾಧಾನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಗೃಹ ಇಲಾಖೆ ನಿದ್ದೆ ಮಾಡುತ್ತಿದೆ, ರೂಪಾ ಅವರು ಮಾಡಿರುವುದು ಆರೋಪವಲ್ಲ, ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ವರದಿ ನೀಡಿದ್ದಾರೆ. ಅವರಿಗೆ ನೊಟೀಸ್ ನೀಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics