ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ ವಿಧವಶರಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದಿಂದ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕೂಡ ಇಂದು ರಜೆ ಘೋಷಿಸಲಾಗಿದೆ.
ಇನ್ನು ಧರಂ ಸಿಂಗ್ ಅವರ ಅಂತ್ಯಕ್ರಿಯೆ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಬುರಗಿಯ ಅವರ ಸ್ವಗ್ರಾಮದಲ್ಲಿ ನಡೆಯಲಿದೆ, ಈ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಸಂಜೆ ಜೇವರ್ಗಿಗೆ ಧರಂಸಿಂಗ್ ಪಾರ್ಥಿವ ಶರೀರ ರವಾನೆಯಾಗಲಿದೆ. ಜೇವರ್ಗಿಯಲ್ಲಿ ನಾಳೆ ಸಂಜೆಯವರೆಗೂ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಮಾಡಲಾಗಿದೆ.
ಧರಂ ಸಿಂಗ್ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಇನ್ನು ಧರಂ ಸಿಂಗ್ ನಿಧನಕ್ಕೆ ಮಾಜಿ ಸಿಎಂ ಎಚ್ . ಡಿ ಕುಮಾರಸ್ವಾಮಿ, ಸಂಸದ ಮಲ್ಲಿಕಾರ್ಜುನ ಖರ್ಗೆ, ಕಾಗೋಡು ತಿಮ್ಮಪ್ಪ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಧರ್ಮಸಿಂಗ್ ಪತ್ನಿ ಪ್ರಭಾವತಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.