ಬೆಂಗಳೂರು: ಕಳೆದ ಬುಧವಾರ ನಿಧನರಾದ ವರನಟ ಡಾ.ರಾಜ್ ಕುಮಾರ್ ಅವರ ಪತ್ನಿ ಹಾಗೂ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (78) ಅವರ ಪಾರ್ಥೀವ ಶರೀರದ ಮೇಲೆ ರಾಷ್ಟ್ರಧ್ವಜ ಹೊದಿಸಿದ್ದನ್ನು ವಿರೋಧಿಸಿ ಬೆಂಗಳೂರಿನ ವಕೀಲರೊಬ್ಬರು ಶುಕ್ರವಾರ ಖಾಸಗಿ ದೂರು ದಾಖಲಿಸಿದ್ದಾರೆ.
ರಾಷ್ಟ್ರಧ್ವಜ ನಿಯಮ 5ರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ವಿಜಯನಗರದ ವಕೀಲ ಚೇತನ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ
ಕಾರ್ಯದರ್ಶಿ ಹಾಗೂ ನಗರ ಪೊಲೀಸ್ ಆಯುಕ್ತರ ವಿರುದ್ಧ ನಗರದ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ಪಾರ್ವತಮ್ಮ ಅವರ ರಾಷ್ಟ್ರಧ್ವಜ ಹೊದಿಸಿದ್ದ ಪಾರ್ಥೀವ ಶರೀರವನ್ನು ಕಂಠೀರವ ಸ್ಟುಡಿಯೋ ಗೆ ಮೆರವಣಿಗೆಯಲ್ಲಿ ಕೊಂಡೊಯ್ದು ಡಾ.ರಾಜ್ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.
ಈ ಬಗ್ಗೆ ಸಾಮಾಜಿಕ ತಾಣಗಳಲ್ಲೂ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಸರ್ಕಾರ ಚಿತ್ರರಂಗದ ಹಿರಿಯ ಸಾಧಕಿಗೆ ಗೌರವ ಕೊಟ್ಟಿರುವ ಬಗ್ಗೆ ನಮ್ಮ ಆಕ್ಷೇಪವಿಲ್ಲ .ಆದರೆ ರಾಷ್ಟ್ರ ಧ್ವಜ ಹೊದಿಸುವ ಅಗತ್ಯವಿತ್ತೆ ಎಂದು ಪ್ರಶ್ನಿಸಿದ್ದರು.