ರಾಜ್ಯ

3 ತಿಂಗಳಲ್ಲಿ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಖಾಯಂ: ಸಿಎಂ ಸಿದ್ದರಾಮಯ್ಯ

Lingaraj Badiger
ಬೆಂಗಳೂರು: ಸುಮಾರು 11 ಸಾವಿರ ಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಹಂತದಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ.
ಇಂದು ವಿಧಾಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪೌರ ಕಾರ್ಮಿಕರ ಗುತ್ತಿಗೆ ಪದ್ದತಿಯನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ಪ್ರಸ್ತೂತ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಗುವುದು ಎಂದರು.
ಮುಂದಿನ ಮೂರು ತಿಂಗಳಲ್ಲಿ ಮೊದಲ ಹಂತದಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಿಕೊಳ್ಳಲಾಗುವುದು. ಉಳಿದ 1 ಸಾವಿರ ಪೌರ ಕಾರ್ಮಿಕರ ನೇಮಕವನ್ನು ನಂತರ ಖಾಯಂಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಪೌರಕಾರ್ಮಿಕರಿಗೆ ಮಧ್ಯಾಹ್ನದ ಊಟದ ಜತೆಗೆ ಒಂದು ದಿನದ ರಜೆ ನೀಡಲಾಗುವುದು. ಪೌರ ಕಾರ್ಮಿಕರು ದುಷ್ಚಟಗಳಿಂದ ದೂರವಿರಬೇಕು. ಯಾವುದೇ ಕಾರಣಕ್ಕೂ ಪೌರ ಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿಯಬಾರದು ಎಂದು ಸಲಹೆ ನೀಡಿದ್ದಾರೆ.
ಇದೇ ವೇಳೆ ಪೌರ ಕಾರ್ಮಿಕರಿಗೆ ಜೀವ ವಿಮೆ, ಆರೋಗ್ಯ ಹಾಗೂ ಬಿಸಿ ಊಟ ಸೇರಿದಂತೆ ಇತರೆ ಸರ್ಕಾರಿ ಉದ್ಯೋಗಿಗಳಿಗೆ ದೊರೆಯುವಂತಹ ಸೌಲಭ್ಯಗಳನ್ನು ಒದಗಿಸಲಾಗುವುದು. ಈ  ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಆದೇಶ ಹೊರಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಲವು ದಿನಗಳಿಂದ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರ ಸೇವಾ ನೌಕರರ ಸಂಘ ಪ್ರತಿಭಟನೆ ನಡೆಸುತ್ತಿದ್ದವು.
SCROLL FOR NEXT