ಸಿಎಂ ಸಿದ್ದರಾಮಯ್ಯ ವಿರುದ್ದ ಫೇಸ್'ಬುಕ್'ನಲ್ಲಿ ಪೋಸ್ಟ್: ಪೇದೆ ಅಮಾನತು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣ ಫೇಸ್'ಬುಕ್ ನಲ್ಲಿ ಅವಮಾನಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಬುಧವಾರ ಅಮಾನತುಗೊಳಿಸಲಾಗಿದೆ...
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣ ಫೇಸ್'ಬುಕ್ ನಲ್ಲಿ ಅವಮಾನಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಬುಧವಾರ ಅಮಾನತುಗೊಳಿಸಲಾಗಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಬೆಣೆಕಟ್ಟಿ ಗ್ರಾಮದ ಸದ್ಯ ಬೆಳ್ತಂಗಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ ಶಿವಪ್ಪ ಅಮಾನತುಗೊಂಡ ಸಿಬ್ಬಂದಿಯಾಗಿದ್ದಾರೆ.
ಸ್ಥಳೀಯ ಕಾಂಗ್ರೆಸ್ ಮುಖಂಡರು ದೂರು ನೀಡಿದ ಹಿನ್ನಲೆಯಲ್ಲಿ ಕರ್ತವ್ಯದಿಂದ ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದನ್ನು ರಾಜ ಶಿವಪ್ಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ವ್ಯಂಗ್ಯ ಮಾಡಿದ್ದರು. ನಮ್ಮ ಸಿದ್ದು ಖಾನ್ ಹೇಳ್ತಾರೆ...ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು, ಆದರೆ ಮೈಲಾರಿ ಕಂಡಾಗ ಸಿಡುಕಿದ ಮುಖ ಮುಲ್ಲಾನನ್ನು ಕಂಡಾಗ ಅರಳಿದ ಮುಖ...' ಎಂದು ಫೇಸ್ ಬುಕ್ ನಲ್ಲಿ ಬರೆದಿದ್ದರು.
ಶಿವಪ್ಪ ಅವರು ಬರೆದಿದ್ದ ಈ ಪೋಸ್ಟ್ ಬಿ.ಎಸ್.ಯಡಿಯೂರಪ್ಪ ಫಾನ್ಸ್ ಪೇಜ್ ನಲ್ಲಿ ಕಾಣಿಸತೊಡಗಿತ್ತು. ಈ ಪೋಸ್ಟ್ ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗತೊಡಿಗಿದ್ದವು. ಇದೀಗ ಪೇದೆಯನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್'ಪಿ ಸುಧೀರ್ ಕುಮಾರ್ ರೆಡ್ಡಿಯವರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.