ಬೆಂಗಳೂರು: ಕರಕುಶಲ ವಸ್ತುಗಳಿಗೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ)ಯಿಂದ ವಿನಾಯ್ತಿ ನೀಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.
ಕರಕುಶಲ ವಸ್ತುಗಳ ಮೇಲೆ ಜಿಎಸ್ ಟಿ ವಿರೋಧಿಸಿ ಹಿರಿಯ ರಂಗಕರ್ಮಿ ಪ್ರಸನ್ನ ಅವರು ಬೆಂಗಳೂರಿನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಆರನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಅರುಣ್ ಜೇಟ್ಲಿ ಅವರಿಗೆ ಪತ್ರ ಬರೆದಿದ್ದಾರೆ.
ಭಾರತದ ಗ್ರಾಮೀಣ ಪ್ರದೇಶದಲ್ಲಿ ಲಕ್ಷಾಂತರ ಬಡ ಕರಕುಶಲ ಕರ್ಮಿಗಳು ವಿವಿಧ ರೀತಿಯ ವಸ್ತುಗಳನ್ನು ಉತ್ಪಾದಿಸುತ್ತಾರೆ. ಅದರ ಮೇಲೆ ಜಿಎಸ್ ಟಿ ತೆರಿಗೆ ವಿಧಿಸಿದರೆ ಲಕ್ಷಾಂತರ ಕರಕುಶಲ ಕರ್ಮಿಗಳ ಜೀವನದ ಮೇಲೆ ಅಡ್ಡ ಪರಿಣಾಮ ಬೀರಲಿದೆ. ಹೀಗಾಗಿ ಜಿಎಸ್ ಟಿ ಮಂಡಳಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಿಎಂ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಜಿಎಸ್ ಟಿ ಮಂಡಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ.