ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇದೇ ಅ.29 ಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಸುದ್ದಿಗಾರರಿಗೆ ತಿಳಿಸಿದರು.
ಅಂದು ವಿಶೇಷ ವಿಮಾನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕ್ಕೆ ಆಗಮಿಸುವ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮುಖೇನ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ತೆರಳುವರು.
ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸುವ ಮೋದಿ ನಂತರ ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸಾರ್ಥಕ ಸೇವೆ ಪೂರೈಸಿದ್ದು, ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ವರ್ಧಂತಿ ಸಹ ಇದೇ ಸಮಯದಲ್ಲಿ ಆಯೋಜನೆಗೊಳ್ಳಲಿದೆ.
ಸ್ವ ಸಹಾಯ ಗುಂಪುಗಳ ಮೂಲಕ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಂತಾರಾಷ್ಟ್ರೀಯ ಮಟ್ಟದ ಮನ್ನಣೆಗೆ ಪಾತ್ರವಾಗಿದೆ.ಮಾಜಿ ರಾಷ್ಟ್ರಪತಿ ದಿ.ಅಬ್ದುಲ್ ಕಲಾಂ, ಕೇಂದ್ರ ಹಾಗೂ ರಾಜ್ಯ ಮಟ್ಟದ ಸಚಿವರು, ಸಂವಿಧಾನಿಕ ಹುದ್ದೆಯಲ್ಲಿದ್ದ ಗಣ್ಯರು ಸಹ ಈ ಹಿಂದೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.