ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಟಿಪ್ಪು ಜಯಂತಿ ಆಚರಣೆ ವಿಚಾರ ಕುರಿತಂತೆ ಯಾರೇ ಕಾನೂನು ಉಲ್ಲಂಘನೆ ಮಾಡಿದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯವರಿಗೆ ಕೋಮುಸೌಹಾರ್ದತೆಯನ್ನು ಕಡಡುವುದೇ ಬಹಮುಖ್ಯ ಕಾರ್ಯವಾಗಿದೆ. ಇಂತಹ ವರ್ತನೆಯಿಂದ ಮತದಾರರ ಮನ ಗೆಲ್ಲಲು ಸಾಧ್ಯವಿಲ್ಲ. ಕಾನೂನು ಸುವ್ಯವಸ್ಥೆ ಹಾಳಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಒಂದು ವೇಳೆ ಕಾನೂನು, ಸುವ್ಯವಸ್ಥೆಯನ್ನು ಹಾಳು ಮಾಡಲು ಯಾರೇ ಪ್ರಯತ್ನ ನಡೆಸಿದರೂ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಈ ನಡುವೆ ಟಿಪ್ಪು ಸುಲ್ತಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ಶಾಸಕ ಸಿಟಿ ರವಿ ವಿರುದ್ಧ ದೂರು ದಾಖಲಾಗಿದೆ.
ಆಲಂ ಪಾಷ ಎನ್ನುವವರು ಬೆಂಗಳೂರಿನ 10ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿದ್ದರಿಂದಾಗಿ ಆಲಂ ಪಾಷ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆಂದು ತಿಳಿದುಬಂದಿದೆ.