ಬೆಂಗಳೂರು: ಸೋಮವಾರ ಮಧ್ಯಾಹ್ನವೂ ಸೇರಿದಂತೆ ಮುಂದಿನ ನಾಲ್ಕು ದಿನಗಳ ಕಾಲ ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು, ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಈ ಮಳೆ ಇನ್ನು ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಇಂದು ಮಧ್ಯಾಹ್ನ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಅವರು ಹೇಳಿದ್ದಾರೆ.
ಏತನ್ಮಧ್ಯೆ ದಾವಣೆಗೆರೆಯಲ್ಲಿ ನಿನ್ನೆ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತ್ತವಾಗಿದ್ದವು, ಸತತ 8 ಗಂಟೆಗಳ ಕಾಲ ಸುರಿದ ಭಾರಿ ಮಳೆಯಿಂದಾಗಿ ದಾವಣಗೆರೆಯ ಬೂದಿಹಾಳ್ ರಸ್ತೆ, ಎಸ್ ಪಿಎಸ್ ನಗರದ ಮನೆಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಳೆಯಿಂದಾಗಿ ಸುಮಾರು 3 ಸಾವಿರ ಮನೆಗಳಿಗೆ ನೀರು ನುಗ್ಗಿ ರಾತ್ರಿ ಇಡೀ ಜನ ನೀರನ್ನು ಹೊರ ಹಾಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಅಂತೆಯೇ ದಾವಣಗೆರೆಯ ಕೇಂದ್ರ ಬಸ್ ನಿಲ್ದಾಣವೂ ಮಳೆ ಅವಾಂತರಕ್ಕೀಡಾಗಿದ್ದು, ನಿಲ್ದಾಣದಲ್ಲಿ ಮೊಣಕಾಲುದ್ದ ನೀರು ನಿಂತ ಪರಿಣಾಮ ಬಸ್ ಸಂಚಾರ ಅಸ್ತವ್ಯಸ್ಥವಾಗಿತ್ತು.