ಬೆಂಗಳೂರು: ಹಾಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗದ ರಾಯಭಾರಿಗಳಾಗಿ ಸ್ಯಾಂಡಲ್ ವುಡ್ ನ ಖ್ಯಾತ ನಟ ಪುನೀತ್ ರಾಜ್ ಕುಮಾರ್, ನಟಿ ಪ್ರಣೀತಾ ಮತ್ತು ಖ್ಯಾತ ಸಾಹಿತಿ ಚಂದ್ರಶೇಖರ ಕಂಬಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಗುರುವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾದಿಕಾರಿ ಸಂಜೀವ್‌ಕುಮಾರ್ ಅವರು, ವಿಧಾನಸಭಾ ಚುನಾವಣೆಯ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ, ಚಿತ್ರನಟ ಪುನೀತ್‌ರಾಜ್‌ಕುಮಾರ್ ಹಾಗೂ ನಟಿ ಪ್ರಣಿತಾ ಅವರನ್ನು ರಾಜ್ಯ ಚುನಾವಣಾ ಆಯೋಗದ ರಾಯಭಾರಿಗಳಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಅಂತೆಯೇ ರಾಜ್ಯ ಚುನಾವಣಾ ಆಯೋಗ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ಸಲುವಾಗಿ ಸಾಹಿತಿ ಚಂದ್ರಶೇಖರ ಕಂಬಾರ, ನಟ ಪುನಿತ್‌ರಾಜ್‌ಕುಮಾರ ಹಾಗೂ ನಟಿ ಪ್ರಣಿತಾ ಅವರನ್ನೊಳಗೊಂಡ ದೃಶ್ಯಾವಳಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, "ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯಕ್ಕೆ ದೊಡ್ಡ ಮಟ್ಟದ ಹೆಸರನ್ನು ತಂದುಕೊಟ್ಟಿದ್ದಾರೆ. ಹಾಗೂ ನಟ ಪುನೀತ್‌ರಾಜ್ ಕುಮಾರ್, ನಟಿ ಪ್ರಣಿತಾ ಸಿನೆಮಾ ಕ್ಷೇತ್ರದಲ್ಲಿ ಜನಾಕರ್ಷಣೆಯ ಕೇಂದ್ರವಾಗಿದ್ದಾರೆ. ಇವರ ಮಾತುಗಳು ಮತದಾರರಿಗೆ ಸ್ಫೂರ್ತಿಯಾಗಲಿದೆ ಎಂದು ಸಂಜೀವ್ ಕುಮಾರು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಾಹಿತಿ ಚಂದ್ರಶೇಖರ ಕಂಬಾರ ಅವರು, "ಮತದಾನ ಮಾಡುವುದು ನಮ್ಮ ಕರ್ತವ್ಯ ಹಾಗೂ ನಮಗೆ ಒದಗಿ ಬಂದ ಭಾಗ್ಯವೂ ಕೂಡ ಆಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರರು ಇದರ ಸದುಪಯೋಗ ಪಡಿಸಿಕೊಂಡು ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಸ್ವಾತಂತ್ರ ಪೂರ್ವದಲ್ಲಿ ನಮಗೆ ಮತದಾನದ ಹಕ್ಕು ಇರಲಿಲ್ಲ. ಅದರಿಂದ ಏನೆಲ್ಲ ಸಮಸ್ಯೆಗಳನ್ನು ಎದುರಿಸಿದ್ದೇವೆ ಎಂಬುದು ನಮ್ಮೆಲ್ಲರಿಗೂ ಅರಿವಿದೆ. ಹೀಗಾಗಿ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಸದ್ಬಳಿಕೆ ಮಾಡಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ಅವರು ಹೇಳಿದರು.