ಹಾವೇರಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಭರವಸೆ ಹಿನ್ನೆಲೆಯಲ್ಲಿ ನಾಳೆ ಕರೆ ನೀಡಿದ್ದ ಉತ್ತರ ಕರ್ನಾಟಕ ಬಂದ್ ಅನ್ನು ಹಿಂಪಡೆಯಲಾಗಿದೆ ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೋತಂಬರಿ ಅವರು ಬುಧವಾರ ತಿಳಿಸಿದ್ದಾರೆ.
ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಆಗಸ್ಟ್ 2ರಂದು ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು.
ಇಂದು ಸಂಜೆ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋತಂಬರಿ ಅವರು, ನಿನ್ನೆ ಬೆಂಗಳೂರಿನಲ್ಲಿ ಸಿಎಂ ಕುಮಾರಸ್ವಾಮಿಯವರು ಸಭೆ ನಡೆಸಿ ಅನ್ಯಾಯ ಸರಿಪಡಿಸುವ ಭರವಸೆ ನೀಡಿದ್ದಾರೆ. ನಮ್ಮ ಬೇಡಿಕೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿರುವ ಅವರು, ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡುವುದು. ಉಪಲೋಕಾಯುಕ್ತ ಕಚೇರಿ, ಕೃಷ್ಣಾ ಜಲಭಾಗ್ಯ ಕಚೇರಿಯನ್ನು ಉತ್ತರ ಕರ್ನಾಟಕದಲ್ಲಿ ಸ್ಥಾಪಿಸುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದಾರೆ. ಅಲ್ಲದೆ, ಚಾಲ್ತಿ ಸಾಲಗಾರ ರೈತರ 1 ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಘೊಷಿಸಿದ್ದಾರೆ. ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ನಡೆಸುವ ಭರವಸೆ ನೀಡಿದ್ದಾರೆ. ಹೀಗಾಗಿ ಬಂದ್ ವಾಪಸ್ ಪಡೆದಿದ್ದೇವೆ ಎಂದು ಹೇಳಿದ್ದಾರೆ.
ನಾಳೆ ಬಂದ್ ಬದಲು ಸಾಂಕೇತಿಕವಾಗಿ ಧರಣಿ ನಡೆಸಿ ಬಳಿಕ ಜಿಲ್ಲಾಧಿಕಾರಿ ಮೂಲಕ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.