ವಿಧಾನಸೌಧದಲ್ಲಿ ನಡೆದ ಸಭೆಗೆ ಆಗಮಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾಮರನ್
ಬೆಂಗಳೂರು: ಬೆಂಗಳೂರು ನಗರದಲ್ಲಿ ರಕ್ಷಣಾ ಇಲಾಖೆಗೆ ಸೇರಿದ ಭೂಮಿಯ ಸ್ವಾಧೀನ ಮಾಡಿಕೊಳ್ಳುವ ಕುರಿತಂತೆ ಉಂಟಾದ ಸಮಸ್ಯೆಯಿಂದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಲು ರಕ್ಷಣಾ ಇಲಾಖೆಯ ಅಧಿಕಾರಿಗಳು ಅವಕಾಶ ನೀಡಬೇಕು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರಿಗಳಿಗೆ ಶನಿವಾರ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಗೆ ಆಗಮಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾಮರನ್ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆತ್ಮೀಯವಾಗಿ ಸ್ವಾಗತಿಸಿದರು.
ಬಳಿಕ ಬಿಬಿಎಂಪಿಯ ವಿವಿಧ ಕಾಮಗಾರಿಗಳಿಗೆ ಅಡ್ಡಿಯಾಗಿರುವ ರಕ್ಷಣಾ ಇಲಾಖೆಯ ಭೂಮಿಯನ್ನು ಬಿಬಿಎಂಪಿಗೆ ವರ್ಗಾಯಿಸುವ ಬಗ್ಗೆ ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ ಮಹತ್ವದ ಸಭೆ ನಡೆಸಿದರು.
ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೆಹಲಿಗೆ ಆಗಮಿಸಿದ್ದಾಗ ಕುಮಾರಸ್ವಾಮಿಯವರು ಈ ಬಗ್ಗೆ ಸಮಾಲೋಚನೆ ಮಾಡಿದ್ದರು. ಈ ಬಗ್ಗೆ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ನಡೆದ ಸಭೆಯಲ್ಲಿ ಬೆಂಗಳೂರಿನಲ್ಲಿ ಕೈಗೊಂಡಿರುವ 10 ಯೋಜನೆಗಳಿಗೆ ಭೂ ವರ್ಗಾವಣೆ ಮಾಡಲು ಒಪ್ಪಿದ್ದೇವೆ. ಜೊತೆಗೆ ತಕ್ಷಣ ಭೂಮಿ ಹಸ್ತಾಂತರಿಸಬೇಕು. ಭೂಮಿ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಯದೆ ಕೂಡಲೇ ಕಾಮಗಾರಿಗೆ ಅವಕಾಶ ನೀಡಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.