ಸಿದ್ದಗಂಗಾ ಶ್ರೀಗಳ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ: ಸಿಎಂ ಕುಮಾರಸ್ವಾಮಿ
ಅನಾರೋಗ್ಯಕ್ಕೆ ತುತ್ತಾಗಿ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಅನಾರೋಗ್ಯಕ್ಕೆ ತುತ್ತಾಗಿ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಸಿದ್ದಗಂಗಾ ಮಠದ ಕಿರಿಯ ಶ್ರೀಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಶ್ರೀಗಳ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ. ಇದಲ್ಲದೆ ಚೆನ್ನೈನ ಆಸ್ಪತ್ರೆಯ ವೈದ್ಯರೊಂದಿಗೂ ನಾನು ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದು, ಶ್ರೀಗಳು ಶೀಘ್ರವೇ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.
ಅಂತೆಯೇ ಸಿದ್ದಗಂಗಾ ಶ್ರೀಗಳ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.
ಮತ್ತೊಂದೆಡೆ ಶ್ರೀಗಳ ಆರೋಗ್ಯದ ಕುರಿತು ಚೆನ್ನೈನ ರೆಲಾ ವೈದ್ಯಕೀಯ ಶಿಕ್ಷಣ ಸಂಸ್ಥೆ ಪ್ರಕಟಣೆ ಹೊರಡಿಸಿದ್ದು, ಲಿವರ್ ಮತ್ತು ಪಿತ್ತರಸ ನಾಳದ ಸಮಸ್ಯೆ ಹಿನ್ನೆಲೆಯಲ್ಲಿ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರು ಶ್ರೀಗಳ ಆರೋಗ್ಯವನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಲಿವರ್ ನ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ. ಈ ನಡುವೆ, ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಸುತ್ತೂರಿನ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚೆನ್ನೈ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.