ರಾಜ್ಯ

ವಿಷ ಪ್ರಸಾದ ದುರಂತ; ಕಾವೇರಿ ಆಸ್ಪತ್ರೆಯಲ್ಲಿ ಮಹಿಳೆ ಸಾವು, ಸಾವಿನ ಸಂಖ್ಯೆ 15ಕ್ಕೆ ಏರಿಕೆ

Srinivasamurthy VN
ಚಾಮರಾಜನಗರ: ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಇಂದು ಮೈಸೂರಿನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ವಾಡಿ ಮಾರಮ್ಮ ದೇವಿಯ ವಿಷ ಪ್ರಸಾದಕ್ಕೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇಂದು ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ದೇಗುಲದ ಆವರಣದಲ್ಲಿ ಪ್ರಸಾದ ತಿಂದು ತೀವ್ರ ಅಸ್ವಸ್ಥರಾಗಿದ್ದ 50 ವರ್ಷದ ದುಂಡಮ್ಮ ಎಂಬ ಮಹಿಳೆಯನ್ನು ಕಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ದುಂಡಮ್ಮ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ತನಿಖೆ ಚುರುಕು, ಕೃಷಿ ಅಧಿಕಾರಿಗಳ ವಿಚಾರಣೆ
ಇನ್ನು ಪ್ರಸಾದಕ್ಕೆ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಚುರುಕುಗೊಂಡಿದ್ದು, ಅತ್ಯಂತ ವಿಷಕಾರಿ ಕ್ರಿಮಿನಾಶಕವನ್ನು ಕೊಂಡವರ ಕುರಿತು ತನಿಖೆ ನಡೆಸಲಾಗುತ್ತಿದೆ. ಪ್ರಸ್ತುತ ವಿಧಿವಿಜ್ಞಾನ ಪ್ರಯೋಗಾಲಯ ನೀಡಿರುವ ವರದಿಲ್ಲಿರುವ ಕ್ರಿಮಿನಾಶಕವನ್ನು ಜಿಲ್ಲಾ ಕೃಷಿ ಅಧಿಕಾರಿಗಳ ಅನುಮತಿ ಇಲ್ಲದೆ ಮಾರಾಟ ಮಾಡುವ ಹಾಗಿಲ್ಲ. ಹೀಗಾಗಿ ಜಿಲ್ಲೆಯ ಕೃಷಿ ಅಧಿಕಾರಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಕ್ರಿಮಿನಾಶಕವನ್ನು ಯಾರು ಕೊಂಡರು, ಏತಕ್ಕಾಗಿ ಕೊಂಡರು ಎಂಬಿತ್ಯಾದಿ ಮಾಹಿತಿಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಮುಜರಾಯಿ ಇಲಾಖೆ ವ್ಯಾಪ್ತಿಗೆ ದೇಗುಲ
ಸುಳ್ವಾಡಿ ಮಾರಮ್ಮ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಳ್ಳಲಾಗುವುದು. ಇದಕ್ಕೆ ಕಿಚ್ಚು ಗುತ್ತಿ ಮಾರಮ್ಮ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರು ಆಗಿರುವ ಹಾಗೂ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ ಅವರು ಒಪ್ಪಿದ್ದಾರೆ. ಸದ್ಯ ದೇವಸ್ಥಾನ ಜಿಲ್ಲಾಡಳಿತದ ವಶದಲ್ಲಿದೆ. ಮುಂದೆಯೂ ಅದನ್ನು ಸರ್ಕಾರವೇ ನಿರ್ವಹಿಸಲಿದೆ ಎಂದು ಶಾಸಕ ನರೇಂದ್ರ ತಿಳಿಸಿದ್ದಾರೆ.
SCROLL FOR NEXT