ಬೆಂಗಳೂರು: ಫೆಬ್ರವರಿ ಮೂರನೇ ವಾರದಿಂದ ರಾಜ್ಯದ ಎಲ್ಲಾ ಕುಟುಂಬಗಳಿಗೂ ಯೂನಿವರ್ಸಲ್ ಹೆಲ್ತ್ ಕಾರ್ಡ್ ವಿತರಣೆ ಮಾಡುವುದಾಗಿ ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.
ಶೀಘ್ರದಲ್ಲೇ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೂನಿವರ್ಸಲ್ ಹೆಲ್ತ್ ಸ್ಕೀಮ್ ಆರಂಭಗೊಳ್ಳಲಿದೆ. ನಾಗರಿಕರು ಸರಕಾರಿ ಆಸ್ಪತ್ರೆಗಳಿಗೆ ತೆರಳಿ ಆಧಾರ್ ಕಾರ್ಡ್ ತೋರಿಸಿ ಈ ಹೆಲ್ತ್ ಕಾರ್ಡ್ ಪಡೆದುಕೊಳ್ಳಬಹುದು. ಬಿಪಿಎಲ್, ಎಪಿಎಲ್ ಸೇರಿ ಎಲ್ಲ ವರ್ಗದವರಿಗೂ ಈ ಯೋಜನೆ ಅನ್ವಯಿಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರದ ಮೋದಿ ಕೇರ್ ಆರೋಗ್ಯ ವಿಮೆ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಕುಮಾರ್ ಅವರು, ಆರೋಗ್ಯ ವಿಮೆಗೆ ರಾಜ್ಯ ಸರ್ಕಾರ 1 ಸಾವಿರ ಕೋಟಿ ರುಪಾಯಿ ಮೀಸಲಿಟ್ಟಿದೆ. ಆದರೆ ಕೇಂದ್ರ ಸರ್ಕಾರ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆಗೆ ಕೇವಲ 2 ಸಾವಿರ ಕೋಟಿ ಮೀಸಲಿಟ್ಟಿದೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದರು.
ರಾಜ್ಯದ 1.30 ಕೋಟಿ ಕುಟುಂಬಗಳು ಯೂನಿವರ್ಸಲ್ ಹೆಲ್ತ್ ಕಾರ್ಡ್ ನ ಫಲಾನುಭವಿಗಳಾಗಲಿದ್ದಾರೆ. ವಿವಿಧ ಆರೋಗ್ಯ ಯೋಜನೆಗಳಿಗೆ ರಾಜ್ಯ ಸರ್ಕಾರ 1,022 ಕೋಟಿ ರುಪಾಯಿ ಖರ್ಚು ಮಾಡುತ್ತಿದ್ದು, ಈ ಹಣವನ್ನು ಈಗ ಹೊಸ ಯೋಜನೆಗೆ ವರ್ಗಾವಣೆ ಮಾಡಲಾಗುವುದು ಎಂದು ರಮೇಶ್ ಕುಮಾರ್ ಅವರು ಈ ಹಿಂದೆ ಮಾಹಿತಿ ನೀಡಿದ್ದರು.