ಬೆಂಗಳೂರು: ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸವನಹಳ್ಳಿಯಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರು ಪರಿಶೀಲನೆ ನಡೆಸಿದರು. ಬಿಬಿಎಂಪಿ ಅಧಿಕಾರಿಗಳ ಜತೆ ಮಾತನಾಡಿದ ಅವರು ಪ್ರಕರಣದ ತನಿಖೆಗೆ ಆದೇಶಿಸಿದ್ದಲ್ಲದೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದರು.
ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಅವರನ್ನು ಮೊಹರಮ್, ರಾಜು ಮತ್ತು ಮದಿನಾ ಎಂದು ಗುರುತಿಸಲಾಗಿದೆ. ಇನ್ನು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 11 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಇನ್ನು ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.