ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, 4 ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಕಲುಷಿತ ನೀರು ಕುಡಿದು ಕರುಳು ಬೇನೆ ಕಾಣಿಸಿಕೊಂಡು ಐವರು ಸಾವಿಗೀಡಾಗಿದ್ದು. 35ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಾನವ ಹಕ್ಕುಗಳ ಆಯೋಗ, ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ.
ಗ್ರಾಮ ಪಂಚಾಯಿತಿ ವತಿಯಿಂದ ನಲ್ಲಿ ಮೂಲಕ ಪೂರೈಸಲಾಗಿರುವ ನೀರನ್ನು ಸೇವಿಸಿದ್ದೇ ಸಾವಿಗೆ ಕಾರಣವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಸಲ್ಲಿಸಿರುವ ವರದಿಯಲ್ಲಿ ಹೇಳಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ಗ್ರಾಮದಲ್ಲಿರುವ ಒಂದು ಪ್ರದೇಶದಲ್ಲಿ 10 ಮಾದರಿಗಳನ್ನು ಸಂಗ್ರಹಿಸಲಾಗಿದ್ದು. ಇದರಲ್ಲಿ 7 ಮಾದರಿಗಳ ವರದಿ ಧನಾತ್ಮಕವಾಗಿವೆ ಎಂದು ಹೇಳಿದ್ದಾರೆ.
ಜಿಲ್ಲಾಧಿಕಾರಿ ಎಂ. ಲೋಕೇಶ್ ಅವರು ಮಾತನಾಡಿ, ಸಂತ್ರಸ್ತ ಕುಟುಂಬಸ್ಥರಿಗೆ ರೂ.2 ಲಕ್ಷ ಪರಿಹಾರವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics