ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಯಲಹಂಕಾದಲ್ಲಿ ನಡೆದ ಜೆಡಿಎಸ್ ನ ಕುಮಾರ ಪರ್ವ ಸಮಾವೇಶದಲ್ಲಿ ಮಾತನಾಡಿರುವ ಹೆಚ್ ಡಿ ಕುಮಾರಸ್ವಾಮಿ, ಮಹದಾಯಿ ವಿಷಯದಲ್ಲಿ ಕಾಂಗ್ರೆಸ್ ರೈತರಿಗೆ ಅನ್ಯಾಯ ಮಾಡಿದೆ. ರೈತರಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್ ಗೆ ಅಧಿಕಾರ ನೀಡಬಾರದು ಎಂದು ರಾಜ್ಯದ ಜನತೆಗೆ ಕುಮಾರಸ್ವಾಮಿ ಕರೆ ನೀಡಿದ್ದಾರೆ.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ರಾಜ್ಯದಲ್ಲಿ ಈಗಲೂ ಅದೆಷ್ಟೋ ಕುಟುಂಬಗಳು ಒಂದು ಹೊತ್ತಿನ ಊಟಕ್ಕೂ ಸಂಕಷ್ಟ ಎದುರಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಆಡಳಿತದಲ್ಲಿ ಅಭಿವೃದ್ಧಿ 10 ವರ್ಷ ಹಿಂದಕ್ಕೆ ಹೋಗಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಅಧಿಕಾರದ ಮದದಲ್ಲಿ ಸಿದ್ದರಾಮಯ್ಯ ಜನತೆಯ ಸಂಕಷ್ಟಗಳನ್ನು ಮರೆತಿದ್ದಾರೆ. ರಾಜ್ಯವನ್ನು ಅಭಿವೃದ್ಧಿಪಡಿಸಲು ನನಗೆ ಒಂದು ಅವಕಾಶ ನೀಡಿ, ನಾನು ಜನರ ಸಮಸ್ಯೆಗಳನ್ನು ಬಗೆಹರಿಸಲು ಮತ್ತೊಮ್ಮೆ ಸಿಎಂ ಆಗಬೇಕು ಜನರ ಸರ್ಕಾರ ಬೇಕೋ, ದರ್ಪ, ದುರಹಂಕಾರದ ಸರ್ಕಾರ ಬೇಕೋ ನಿರ್ಧರಿಸಿ ಎಂದು ಕುಮಾರಸ್ವಾಮಿ ರಾಜ್ಯದ ಜನತೆಗೆ ಹೇಳಿದ್ದಾರೆ.