ಬೆಂಗಳೂರು: ಮುಂದಿನ ದಿನಗಳಲ್ಲಿ ತಾವು ಕೃಷ್ಣ ರಾಜ ಸಾಗರ ಅಣೆಕಟ್ಟೆಗೆ ಭೇಟಿ ನೀಡಿ ಬಾಗಿನ ಸಮರ್ಪಿಸುವ ಕುರಿತು ಚಿಂತಿಸುತ್ತಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ದಸರಾ ಪೂರ್ವ ಸಿದ್ಧತಾ ಕಾರ್ಯಕ್ರಮಗಳ ಸಭೆಯಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವುದು ಖುಷಿತಂದಿದೆ. ಪ್ರಮುಖವಾಗಿ ಕಾವೇರಿ ಜಲಾನಯನ ಪ್ರದೇಶಗಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು. ಡ್ಯಾಂಗಳ ನೀರಿನಮಟ್ಟ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ತಾವು ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ. ಬಳಿಕ ಮೈಸೂರಿಗೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಬಳಿಕ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಭೇಟಿ ಅಲ್ಲಿ ಬಾಗಿನ ಅರ್ಪಿಸುವ ಕುರಿತು ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಡ್ಯಾಂಗಳು ತುಂಬಿದ ನಂತರ ತಮಿಳುನಾಡಿಗೆ ನೀರು
ಇದೇ ವೇಳೆ ತಮಿಳುನಾಡಿಗೆ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದ ಡ್ಯಾಂಗಳು ತುಂಬಿದ ಬಳಿಕವಷ್ಟೇ ತಮಿಳುನಾಡಿಗೆ ನೀರು ಬಿಡಲಾಗುತ್ತದೆ ಎಂದು ಹೇಳಿದರು.
ಇನ್ನು ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿರುವುದರಿಂದ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕಾವೇರಿ ಕಣಿವೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಇನ್ನೊಂದು ವಾರ ಮಳೆ ಆದರೆ ಕೆಆರ್ಎಸ್ ತುಂಬುತ್ತದೆ.