ಕಾಂಗ್ರೆಸ್ -ಜೆಡಿಎಸ್ ನಡುವೆ ಸಮಾನವಾಗಿ ಖಾತೆ ಹಂಚಿಕೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸಮಾನ ರೀತಿಯಲ್ಲಿ ಖಾತೆ ಹಂಚಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನವದೆಹಲಿ: ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸಮಾನ ರೀತಿಯಲ್ಲಿ ಖಾತೆ ಹಂಚಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ನಾಯಕರು ಪರಸ್ಪರ ಒಪ್ಪಿಗೆ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೆಲ ಸಲಹೆ ನೀಡಿದ್ದಾರೆ. ಅದನ್ನು ಆ ಪಕ್ಷದ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಸಮನ್ವಯ ಸಮಿತಿ, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸೇರಿದಂತೆ ಎಲ್ಲವೂ ಅಂತಿಮಗೊಂಡಿದೆ. ಹೆಚ್ ಡಿ ಕುಮಾರಸ್ವಾಮಿ, ರಾಹುಲ್ ಗಾಂಧಿ ಪೋನ್ ನಲ್ಲಿ ನಿನ್ನೆ ಮಾತನಾಡಿದ ನಂತರ ಇಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು ರಾಹುಲ್ ಗಾಂಧಿ ಜೊತೆ ಮಾತನಾಡಿದ್ದು, ಎಲ್ಲವೂ ಅಂತಿಮವಾಗಿದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಆಲಿ ಹೇಳಿದರು.
ಚರ್ಚೆ ವೇಳೆ ಸುಭದ್ರ ಸರ್ಕಾರಕ್ಕೆ ಸಹಕಾರ ನೀಡುವಂತೆ ರಾಹುಲ್ ಗಾಂಧಿಗೆ ದೇವೇಗೌಡರು ಮನವಿ ಮಾಡಿದ್ದು, ರಾಜ್ಯದ ಅಭಿವೃದ್ದಿಗೆ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.