ಬೆಂಗಳೂರು; ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶುಕ್ರವಾರದಿಂದ ಆರಂಭಗೊಂಡಿದ್ದು, 8,54 ವಿದ್ಯಾರ್ಧಿಗಳ ಭವಿಷ್ಯ ನಿರ್ಧಾರವಾಗಲಿದೆ.
ರಾಜ್ಯದ ಒಟ್ಟು 2,817 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆರಂಭಗೊಂಡಿದ್ದು, ಒಟ್ಟು 34 ಶೈಕ್ಷಣಿಕ ಜಿಲ್ಲೆಗಳ 8,54,424 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶೇ.100 ಸಿಸಿಟಿವಿ ಕಣ್ಗಾವಲಲ್ಲಿ ಪರೀಕ್ಷೆಗಳು ನಡೆಯುತ್ತಿದೆ.
ರಾಜ್ಯದ 14,385 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, 1,011 ಕ್ಲಸ್ಟರ್ ಕೇಂದ್ರ ಹಾಗೂ 1807 ನಾನ್ ಕ್ಲಸ್ಟರ್ ಕೇಂದ್ರಗಳಿವೆ. 45 ಕೇಂದ್ರಗಳು ಸೂಕ್ಷ್ಮ ಮತ್ತು 23 ಅತೀ ಸೂಕ್ಷ್ಮ ಕೇಂದ್ರಗಳೆಂದು ಗುರ್ತಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿ ಮೊಬೈಲ್ ಫೋನ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಸ್ತರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಗುರುತಿನ ಚೀಟಿಗಳನ್ನು ನೀಡಲಾಗಿದೆ.
21 ವಿಭಾಗೀಯ ಮಟ್ಟದ ಅಧಿಕಾರಿಗಳನ್ನು ಜಿಲ್ಲಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಒಟ್ಟು 2,043 ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರದ ವೀಕ್ಷಕರಾಗಿ ನೇಮಕಾತಿ ಮಾಡಲಾಗಿದೆ. 406 ಡಯಟ್ ಉಪನ್ಯಾಸಕರನ್ನು ಜಾಗೃತದಳದ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.