ಹಾಸನ: ಮಾಜಿ ಸಚಿವ ಕೆ.ಎಚ್.ಹನುಮೇಗೌಡ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾಗಿದ್ದಾರೆ.
ಹನುಮೇಗೌಡ ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಒಂದು ವಾರದ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹನುಮೇಗೌಡರು 1972ರಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ಸಂಸ್ಥಾ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯ ಗಳಿಸುವ ಮೂಲಕ ರಾಜಕೀಯ ಪ್ರವೇಶಿಸಿದರು. 1978ರಲ್ಲಿ ಕಾಂಗ್ರೆಸ್ ಐ, 1989ರಲ್ಲಿ ಕಾಂಗ್ರೆಸ್, 1999ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ವೀರಪ್ಪ ಮೊಯಿಲಿ ಅವರ ಸರ್ಕಾರದಲ್ಲಿ ಕಾಡಾ ಸಚಿವರಾಗಿದ್ದರು.
ಶಾಂತಿಗ್ರಾಮ ಸಮೀಪದ ಕೆ.ಬ್ಯಾಡರಹಳ್ಳಿಯಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.