ಮೈತ್ರಿ ಪಕ್ಷಗಳಿಂದ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಬಿಎಸ್ ವೈ ಸರ್ಕಾರದ ಭವಿಷ್ಯ ನಿರ್ಧಾರ
ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿರುವ ರಾಜ್ಯಪಾಲ ವಜುಭಾಯ್ ವಾಲಾ ಅವರ ನಿರ್ಧಾರವನ್ನು ಪ್ರಶ್ನಿಸಿ ಮೈತ್ರಿ ಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ನವದೆಹಲಿ: ಬಹುಮತ ರಹಿತದ ಹೊರತಾಗಿಯೂ ಅತೀ ದೊಡ್ಡ ಪಕ್ಷ ಎಂಬ ಆಧಾರದ ಮೇಲೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿರುವ ರಾಜ್ಯಪಾಲ ವಜುಭಾಯ್ ವಾಲಾ ಅವರ ನಿರ್ಧಾರವನ್ನು ಪ್ರಶ್ನಿಸಿ ಮೈತ್ರಿ ಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ರಾಜ್ಯಪಾಲರು ಅವಕಾಶ ನೀಡಿರುವ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್–ಜೆಡಿಎಸ್ ಸಲ್ಲಿಸಿರುವ ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿ ತೀರ್ಪು ನೀಡುವ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 10.30ಕ್ಕೆ ವಿಚಾರಣೆ ಆರಂಭವಾಗಲಿದ್ದು, ಈ ವೇಳೆ ನ್ಯಾಯಾಧೀಶರು ಕೇಳುವ ಪ್ರಶ್ನೆಗಳು ಹಾಗೂ ದಾಖಲೆಗಳನ್ನು ಒದಗಿಸಲು ಪರ ಮತ್ತು ವಿರೋಧಿಗಳ ವಕಾಲತ್ತು ವಹಿಸಿರುವ ನ್ಯಾಯಾಧೀಶರು ಸಿದ್ಧತೆ ಮಾಡಿಕೊಂಡಿದ್ದಾರೆ.
‘ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು’ ಎಂದು ಕೋರಿ ಕಾಂಗ್ರೆಸ್–ಜೆಡಿಎಸ್ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಬೆಳಗಿನ ಜಾವ 1.45ಕ್ಕೆ, ತ್ವರಿತ ವಿಚಾರಣೆಗಾಗಿ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ, ಎಸ್.ಎ. ಬೋಬ್ಡೆ ಹಾಗೂ ಅಶೋಕ್ ಭೂಷಣ್ ಅವರಿದ್ದ ತ್ರಿಸದಸ್ಯ ಪೀಠ, ‘ರಾಜ್ಯಪಾಲರ ವಿವೇಚನಾ ಅಧಿಕಾರಕ್ಕೆ ಸಂಬಂಧಿಸಿದಂತೆ ಹಸ್ತಕ್ಷೇಪ ಮಾಡಲಾಗದು’ ಎಂದು ಅಭಿಪ್ರಾಯಪಟ್ಟಿದ್ದರು,. ಅಂತೆಯೇ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.
ಅಂತೆಯೇ ಸರ್ಕಾರ ರಚನೆಯ ಪ್ರಸ್ತಾವನೆಯೊಂದಿಗೆ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಸಲ್ಲಿಸಿರುವ ಶಾಸಕರ ಬೆಂಬಲದ ಪತ್ರದ ಪ್ರತಿಯನ್ನು ಹಾಜರುಪಡಿಸುವಂತೆ ಸೂಚಿಸಿ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಿತ್ತು. ಇದೀಗ ಇಂದು ಸುಪ್ರೀಂ ಕೋರ್ಟ್ ನಲ್ಲಿ ಈ ಅರ್ಜಿಯ ವಿಚಾರಣೆ ನಡೆಸಲಿದೆ. ಹೀಗಾಗಿ ಎಲ್ಲರ ಚಿತ್ರ ಸುಪ್ರೀಂ ಕೋರ್ಟ್‌ನತ್ತ ನೆಟ್ಟಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್–ಜೆಡಿಎಸ್ ‘ಮೈತ್ರಿ’ ಕೂಟ ತಮ್ಮ ಮುಂದಿನ ನಡೆಯನ್ನು ನಿರ್ಧರಿಸಲು ‘ಬಕ’ಪಕ್ಷಿಯಂತೆ ಕಾಯುತ್ತಿವೆ.
ಕಾಲಾವಕಾಶ ಕಡಿತ ಸಾಧ್ಯತೆ
ಇನ್ನು ಬಹುಮತ ಸಾಬೀತಿಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ನೀಡಿರುವ 15 ದಿನಗಳ ಕಾಲಾವಕಾಶವನ್ನು ಸುಪ್ರೀಂ ಕೋರ್ಟ್ ಕಡಿತ ಮಾಡುವ ಸಾಧ್ಯತೆಗಳ ಕುರಿತೂ ತಜ್ಞರು ಚರ್ಚೆ ನಡೆಸುತ್ತಿದ್ದಾರೆ. ಹೀಗಾಗಿ ಕೇವಲ 1 ದಿನ ಪ್ರಾಯದ ಯಡಿಯೂರಪ್ಪ ಸರ್ಕಾರಕ್ಕೆ ಇಂದು ಮಹತ್ವದ ದಿನವಾಗಿದೆ.